ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಪತ್ನಿ ಹಾಗೂ ಸಂಸ್ಥೆಯ ಸಿಇಒ ಮಾಳವಿಕಾ ಹೆಗ್ಡೆ ಅವರಿಗೆ ಬೆಂಗಳೂರಿನ ನ್ಯಾಯಾಲಯ ಜಾಮೀನು ನೀಡಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಮಾಳವಿಕಾ ಹೆಗ್ಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 26ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ನಗರದ ಲಕ್ಷ್ಮೀ ವಿಲಾಸ ಬ್ಯಾಂಕ್ನಿಂದ ಕೆಫೆ ಕಾಫಿ ಡೇಗೆ ಸಾಲ ಪಡೆಯಲಾಗಿತ್ತು. ಈ ಸಾಲವನ್ನು ಮರುಪಾವತಿಸಲು ನೀಡಿದ್ದ ನಾಲ್ಕು ಚೆಕ್ಗಳು ಬೌನ್ಸ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಬ್ಯಾಂಕ್ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಮಾಳವಿಕಾ ಹೆಗ್ಡೆ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆಗೆ ಸಹಕರಿಸುವುದಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಶ್ಯೂರಿಟಿ ಒದಗಿಸಲು ಸೂಚಿಸಿ, ಜಾಮೀನು ಮಂಜೂರು ಮಾಡಿ ವಿಚಾರಣೆ ಮುಂದೂಡಿತು.