ಬೆಂಗಳೂರು : ಕೆಜಿಹಳ್ಳಿ ಮತ್ತು ಡಿಜೆಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸಂಪತ್ ರಾಜ್ ಅವರ ಜಾಮೀನು ಅರ್ಜಿಯನ್ನು ನಗರದ 67ನೇ ಹೆಚ್ಚುವರಿ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಡಿ.1ರಂದು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಸಂಪತ್ ರಾಜ್ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ರೋಷನ್ ಬೇಗ್ ಬಿಡುಗಡೆ.. ಜೈಲಿನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಭಾವುಕ
ಭಯೋತ್ಪಾದನೆ ನಿಗ್ರಹ ಘಟಕ ಮತ್ತು ಪುಲಿಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಂಪತ್ ರಾಜ್ ಅಲ್ಲಿಂದಲೇ ಪರಾರಿಯಾಗಿದ್ದರು.
ಬಳಿಕ ಆರೋಪಿ ಬಂಧನಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದ ನಂತರ ನ.16ರಂದು ಸಿಸಿಬಿ ಪೊಲೀಸರು ಸಂಪತ್ ರಾಜ್ ಬಂಧಿಸಿದ್ದರು. ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದ ವಿಚಾರಣಾ ನ್ಯಾಯಾಲಯವು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಸಂಪತ್ ರಾಜ್ ಇದೀಗ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಸಂಪತ್ ರಾಜ್ಗೆ ಜೈಲೂಟವೇ ಗತಿ