ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮೇಯರ್ ಸಂಪತ್ ರಾಜ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ನವೆಂಬರ್ 3ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಸಂಪತ್ ರಾಜ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಇಂದು 62ನೇ ಸಿಟಿ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದರು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿತು.
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ನೀಡಿದ ಹೇಳಿಕೆ ಮೇರೆಗೆ ಪೊಲೀಸರು ಸಂಪತ್ ರಾಜ್ ನನ್ನು ಆರೋಪಿಯಾಗಿ ಪರಿಗಣಿಸಿದ್ದಾರೆ. 12 ಕ್ಕೂ ಹೆಚ್ಚು ಆರೋಪಿಗಳು ಸಂಪತ್ ರಾಜ್ ಆಪ್ತರ ಸೂಚನೆ ಮೇರೆಗೆ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ದಾಳಿ ನಡೆಸಿದ ಆರೋಪವಿದೆ. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಬಂಧಿಸುವ ಭಯಕ್ಕೆ ಒಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.