ಬೆಂಗಳೂರು: ಇಂದು ರಾಜ್ಯ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದ್ದು, ವಿಧಾನ ಪರಿಷತ್ ಹಾಗೂ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಿ ಪಟ್ಟಿ ಸಿದ್ಧಪಡಿಸುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದು, ಬೆಳಗ್ಗೆ 11.45ಕ್ಕೆ ಇಲ್ಲಿನ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದ್ದು, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಸವರಾಜ ಹೊರಟ್ಟಿ ಹೆಸರು ಬಹುತೇಕ ಫೈನಲ್ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಸಭೆ ಮತ್ತು ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಜೊತೆಗೆ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಹಾಲಿ ರಾಜ್ಯಸಭೆ ಸದಸ್ಯರಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೆ.ಸಿ. ರಾಮಮೂರ್ತಿ ಅವರನ್ನೇ ಮುಂದುವರೆಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಶಾಸಕರ ಸಂಖ್ಯೆ ಆಧಾರದಲ್ಲಿ ಎರಡು ಸ್ಥಾನ ಪಡೆಯುವ ಬಿಜೆಪಿ ಹೆಚ್ಚುವರಿ ಮತಗಳನ್ನು ಹೊಂದಲಿದೆ. ಕಾಂಗ್ರೆಸ್ಗೆ ಒಂದು ಸ್ಥಾನ ಸಿಗಲಿದ್ದು, ಜೆಡಿಎಸ್ಗೆ ಇತರೆ ಪಕ್ಷದ ಮತ ಅನಿವಾರ್ಯ. ಹಾಗಾಗಿ ಬಿಜೆಪಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗ್ತಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇದರಲ್ಲಿ ನಾಲ್ಕು ಸ್ಥಾನ ಬಿಜೆಪಿಗೆ ಲಭಿಸಲಿವೆ. ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಲಕ್ಷ್ಮಣ ಸವದಿ ಹಾಗೂ ಲೆಹರ್ ಸಿಂಗ್ ಅವರನ್ನು ಪುನರಾಯ್ಕೆ ಮಾಡಬೇಕೊ ಅಥವಾ ಬೇರೆಯವರಿಗೆ ನೀಡಬೇಕೊ ಎನ್ನುವ ಕುರಿತಂತೆಯೂ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಸದಸ್ಯ ಜಗದೀಶ ಹಿರೇಮನಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ, ಸಿದ್ದರಾಜು, ಶಿಕ್ಷಕರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮೋಹನ್ ಲಿಂಬಿಕಾಯಿ ಅವರ ಹೆಸರು ಪರಿಷತ್ ಸ್ಥಾನಕ್ಕೆ ಕೇಳಿಬರುತ್ತಿದ್ದು, ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.
(ಇದನ್ನೂ ಓದಿ: ಶಿಕ್ಷಕರ, ಪದವೀಧರರ ಕ್ಷೇತ್ರದ ಚುನಾವಣೆ : ಉಸ್ತುವಾರಿಗಳ ತಂಡ ರಚಿಸಿ ಅಖಾಡಕ್ಕಿಳಿದ ಬಿಜೆಪಿ)