ಬೆಂಗಳೂರು: ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಹು ನಿರೀಕ್ಷಿತ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಕುರಿತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಜೂನ್ ತಿಂಗಳಲ್ಲಿ ನಡೆಯಲಿರುವ ಮೆಲ್ಮನೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಅಭ್ಯರ್ಥಿಗಳ ಆಯ್ಕೆಯ ಕುರಿತು ಚರ್ಚೆ ನಡೆಯಲಿದೆ. ಈಗಾಗಲೇ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ನಮೋಶಿ ಮತ್ತು ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್. ವಿ. ಸಂಕನೂರು ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿರುವ ರಾಜ್ಯ ಬಿಜೆಪಿ ಘಟಕ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜೆಡಿಎಸ್ ಉಚ್ಛಾಟಿತ ಸದಸ್ಯ ಪುಟ್ಟಣ್ಣ ಬಹುತೇಕ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಇದೆ ವೇಳೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.