ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಏಪ್ರಿಲ್ 16 ಮತ್ತು 17ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಆಹ್ವಾನ ನೀಡಲಾಗಿದೆ.
ನವದೆಹಲಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ, ಕಾರ್ಯಕಾರಿಣಿಗೆ ಆಗಮಿಸುವಂತೆ ಆಹ್ವಾನಿಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜತೆಗೆ ಈ ಬಾರಿ ಜೆ.ಪಿ.ನಡ್ಡಾ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ, ಯಡಿಯೂರಪ್ಪ ರಾಜ್ಯ ಪ್ರವಾಸದ ಕುರಿತು ಈ ಬಾರಿಯ ಸಭೆಯಲ್ಲಿ ಮಹತ್ವದ ಚರ್ಚೆಯಾಗಲಿದೆ ಎನ್ನಲಾಗಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾ.30 ಮತ್ತು 31ರಂದು ನಡೆಯಬೇಕಾಗಿದ್ದ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿತ್ತು. ಸಂಸತ್ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಪಕ್ಷದಿಂದ ವಿಪ್ ಜಾರಿ ಮಾಡಿದ್ದರಿಂದ ಕೇಂದ್ರ ಸಚಿವರು, ಕೇಂದ್ರದ ನಾಯಕರು ಭಾಗವಹಿಸಲು ಕಷ್ಟವಾಗಲಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಮುಂದೂಡಿಕೆ..!