ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಬಿಜೆಪಿಯ ಅಗ್ರಗಣ್ಯ ನಾಯಕರು, ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿರಬಹುದು. ಆದರೆ, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರವಾಸ ಮಾಡುವುದಾಗಿ ತಿಳಿಸಿದ್ದಾರೆ. ಅವರು ಸಕ್ರೀಯ ರಾಜಕಾರಣದಲ್ಲಿ ಇರಲಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.
ಶಿಕಾರಿಪುರದಲ್ಲಿ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ, ಪುತ್ರ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂದು ಯಡಿಯೂರಪ್ಪ ಪ್ರಕಟಿಸಿದ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, ಚುನಾವಣಾ ನಿವೃತ್ತಿ ಕುರಿತು ಯಡಿಯೂರಪ್ಪ ಹೇಳಿಕೆ ಬಗ್ಗೆ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ಪ್ರತಿಕ್ರಿಯೆ ಕೊಡಲಿದ್ದಾರೆ.
ಆದರೆ, ಇನ್ನೂ ಹೈಕಮಾಂಡ್ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಯಡಿಯೂರಪ್ಪ ಬಿಜೆಪಿಯ ಅಗ್ರಗಣ್ಯ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ಯಡಿಯೂರಪ್ಪ, ವಿಜಯೇಂದ್ರ ವಿಚಾರದಲ್ಲಿ ರಾಜ್ಯಾಧ್ಯಕ್ಷರು, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಹೈಕಮಾಂಡ್ ನಿರ್ಣಯಿಸಲಿದೆ : ಸಚಿವ ಬಿಸಿ ನಾಗೇಶ್ ಮಾತನಾಡಿ, ಯಡಿಯೂರಪ್ಪ ಅವರು ಅತ್ಯಂತ ಶ್ರೇಷ್ಠ ನಾಯಕ. ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಕನಸು ಕಾಣ್ಬೇಡಿ ಎಂದು ಬಿಎಸ್ವೈ ಹೇಳಿದ್ದಾರೆ. ಯಡಿಯೂರಪ್ಪ ಅವರಂತೆ ಹಿರಿಯರು ಇಂದು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಅಂತಿಮವಾಗಿ ಏನೇ ನಿರ್ಣಯ ಮಾಡಿದರೂ ಹೈಕಮಾಂಡ್ ಮಾಡಲಿದೆ ಎಂದರು.
75ವರ್ಷ ಸೀಮಿತ ಮಾಡಿರೋದು ಶಾಪಾನಾ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ನಾಗೇಶ್, ಬಿಜೆಪಿಯಲ್ಲಿ ಯಾವುದೂ ಶಾಪ ಅಲ್ಲ. ಏನೇ ನಿರ್ಧಾರ ತೆಗೆದುಕೊಂಡರೂ ಅದು ಟೀಮ್ ನಿರ್ಧಾರ ಆಗಿರಲಿದೆ ಎಂದರು.
ಇದನ್ನೂ ಓದಿ : ನಾನು ಇರೋವರೆಗೂ ನಿಮ್ಮನ್ನ ಯಾರನ್ನೂ ಸಿಎಂ ಆಗೋಕೆ ಬಿಡೋದಿಲ್ಲ: ಬಿಎಸ್ವೈ