ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಅಹೋರಾತ್ರಿ ಧರಣಿಯ ವಿರುದ್ಧ ಬಿಜೆಪಿ ಕೂಡ ಸಭೆ ನಡೆಸಿದ್ದು ಗಮನ ಸೆಳೆದಿದೆ.
ಚೆನ್ನೇನಹಳ್ಳಿಯಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕಾರಿಗಳ ಸಭೆ ನಡೆಯಿತು. ಸಂಘದ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ಸಚಿವ ಈಶ್ವರಪ್ಪ ಹೇಳಿಕೆ ಮತ್ತು ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಲಾಯಿತು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟದ ಕುರಿತು ಚರ್ಚೆ ನಡೆಸಲಾಯಿತು. ಕಾಂಗ್ರೆಸ್ ವಿರುದ್ಧ ಜನಜಾಗೃತಿ ಮೂಡಿಸುವ, ಕಲಾಪ ವ್ಯರ್ಥ ಮಾಡುತ್ತಿರುವ ಕುರಿತು ಅರಿವು ಮೂಡಿಸಿ ಬಿಜೆಪಿ ಮೇಲಾಗಲಿರುವ ನಕಾರಾತ್ಮಕ ಅಂಶಗಳನ್ನು ದೂರ ಮಾಡಿಕೊಳ್ಳುವ ಬಗ್ಗೆಯೂ ಮಾತುಕತೆ ನಡೆಸಲಾಯಿತು ಎಂದು ತಿಳಿದು ಬಂದಿದೆ.
ಸಂಘ ಪರಿವಾರದ ಜೊತೆಗಿನ ಸಭೆಯ ಬೆನ್ನಲ್ಲೇ ಇಂದು ಬೆಳಗ್ಗೆ 10 ಗಂಟೆಗೆ ಬಿಜೆಪಿ ಕಚೇರಿಯಲ್ಲಿನ ಜಗನ್ನಾಥ ಭವನದಲ್ಲಿ ಇಡೀ ದಿನ ಪದಾಧಿಕಾರಿಗಳ ಸಭೆ ನಡೆಯಲಿದೆ. ಸಂಜೆ ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಗೆ ಆಗಮಿಸಲಿದ್ದಾರೆ.
ನಾಳೆ ಕಾಂಗ್ರೆಸ್ ಮುಖಂಡ ಲಿಂಗೇಶ್ ಬಿಜೆಪಿಗೆ: ನಾಳೆ ಸಂಜೆ 6 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ವಿಧಾನ ಪರಿಷತ್ ಸದಸ್ಯ ಸಿಪಿ.ಯೋಗಿಶ್ವರ್ ಸಮ್ಮುಖದಲ್ಲಿ ಚನ್ನಪಟ್ಟಣ ಹಾಗೂ ರಾಮನಗರದ ಕಾಂಗ್ರೆಸ್ ಮುಖಂಡ ಲಿಂಗೇಶ್ ಮತ್ತು ಅವರ ನೂರಾರು ಬೆಂಬಲಿಗರು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.