ಬೆಂಗಳೂರು: ನಗರದ ಮಠದಹಳ್ಳಿ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಂಡಿದ್ದ 1 ಎಕರೆ 11 ಗುಂಟೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಲ್ಲಿಸಿರುವ ದೂರನ್ನು ಹಿಂಪಡೆಯುವುದಾಗಿ ದೂರುದಾರ ಜಯಕುಮಾರ್ ಹಿರೇಮಠ್ ಹೈಕೋರ್ಟ್ಗೆ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಅವರು 2017ರಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ದೂರುದಾರ ಜಯಕುಮಾರ್ ಹಿರೇಮಠ ಪರ ವಕೀಲರು ಪೀಠಕ್ಕೆ ಮೆಮೋ ಸಲ್ಲಿಸಿ ದೂರು ಹಿಂಪಡೆಯುವುದಾಗಿ ತಿಳಿಸಿದರು.
(ಇದನ್ನೂ ಓದಿ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರ!)
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ದೂರು ಹಿಂಪಡೆಯುವ ಕುರಿತು ದೂರುದಾರರು ವಿವರಣೆ ನೀಡಬೇಕು. ಬಳಿಕ ಈ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 1977ರಲ್ಲಿ ಮಠದ ಹಳ್ಳಿ ಬಡಾವಣೆಗೆ ಭೂಮಿ ವಶಪಡಿಸಿಕೊಂಡಿತ್ತು. ಈ ಭೂಮಿಯಲ್ಲಿ ಸರ್ವೆ ನಂಬರ್ 7ರಲ್ಲಿದ್ದ ತಿಮ್ಮಾರೆಡ್ಡಿ, ನಾಗಪ್ಪ ಮತ್ತು ಮುನಿಸ್ವಾಮಪ್ಪಗೆ ಸೇರಿದ್ದ 1 ಎಕರೆ 11 ಗುಂಟೆ ಭೂಮಿಯನ್ನು 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅಕ್ರಮವಾಗಿ ಡಿನೋಟಿಫೈ ಮಾಡಿಸಿದ್ದಾರೆ ಎಂದು ಆರೋಪಿಸಿ ಜಯಕುಮಾರ್ ಹಿರೇಮಠ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಆ ಬಳಿಕ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಬಿಎಸ್ವೈ 2017ರಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ: ನಾಳೆ ನಾವು ಕಲಾಪ ಬಹಿಷ್ಕರಿಸುತ್ತೇವೆ ಎಂದ ಸಿದ್ದರಾಮಯ್ಯ