ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಅನೇಕ ಮಹತ್ವದ ವಿಚಾರಗಳು ಚರ್ಚೆಗೆ ಬರಲಿದೆ.
ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಹಾಗು ಹೊಸ ಮರಳು ನೀತಿಯನ್ನು ಜಾರಿಗೊಳಿಸಲು ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು 'ಕಿತ್ತೂರು ಕರ್ನಾಟಕ' ಪ್ರದೇಶ ಎಂದು ನಾಮಕರಣ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಅಡ್ಡಲಾಗಿ 1348 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ 'ಪಶ್ಚಿಮವಾಹಿನಿ ಯೋಜನೆ'ಯ ರೂ. 3,986.25 ಕೋಟಿ ರೂ. ಮೊತ್ತದ ಮಾಸ್ಟರ್ ಪ್ಲಾನ್‌ಗೆ ತಾತ್ವಿಕ ಹಾಗೂ 2021-22ನೇ ಸಾಲಿನಲ್ಲಿ ರೂ. 500 ಕೋಟಿ ರೂಪಾಯಿ ಅಂದಾಜು ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ ಇದೆ.
'ಕರ್ನಾಟಕ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ನಿಯಮಗಳು, 2021'ಕ್ಕೆ ಅನುಮೋದನೆ, ಬೆಂಗಳೂರು ನಗರ ಜಿಲ್ಲೆಯ ವಿವಿಧ ಗ್ರಾಮಗಳ ವಿವಿಧ ಸರ್ವೆ ನಂಬರ್‌ಗಳಲ್ಲಿ ಒಟ್ಟು 69-07 ಎಕರೆ/ ಗುಂಟೆ 'ಸರ್ಕಾರಿ ಗೋಮಾಳ' ಮತ್ತು 'ಸರ್ಕಾರಿ ಖರಾಬು' ವರ್ಗೀಕರಣಗಳ ಜಮೀನುಗಳನ್ನು 'ಬೆಂಗಳೂರು ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ"ಯನ್ನು ಅನುಷ್ಠಾನಗೊಳಿಸಲು 'ರಾಜೀವ್ ಗಾಂಧಿ ವಸತಿ ನಿಗಮ'ಕ್ಕೆ ಮಂಜೂರು ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ : ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾಗಿ