ಬೆಂಗಳೂರು: ಐ ಮಾನಿಟರಿ ಅಡ್ವೈಸರಿ( ಐಎಂಎ) ಬಹುಕೋಟಿ ವಂಚನೆ ಆರೋಪ ಪ್ರಕರಣದ ತನಿಖೆ 2021ರ ಜನವರಿ ತಿಂಗಳಲ್ಲಿ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ತನಿಖಾ ಸಂಸ್ಥೆ( ಸಿಬಿಐ) ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಸಾರ್ವಜನಿಕರಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಮಾಡಿರುವ ಐಎಂಎ ಸಂಸ್ಥೆಯ ವಿರುದ್ಧ ಸಿಬಿಐ ತನಿಖೆ ಕೋರಿ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು. ಈ ವೇಳೆ, ಸಿಬಿಐ ಪರ ವಿಶೇಷ ಅಭಿಯೋಜಕ ಪಿ ಪ್ರಸನ್ನಕುಮಾರ್ ಪೀಠಕ್ಕೆ ಮಾಹಿತಿ ನೀಡಿ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತಂಡದ ಹತ್ತು ಮಂದಿ ತನಿಖಾಧಿಕಾರಿಗಳಲ್ಲಿ 6 ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಸದ್ಯ ಇಬ್ಬರು ಅಧಿಕಾರಿಗಳು ಕ್ವಾರಂಟೈನ್ನಲ್ಲಿ ಇದ್ದಾರೆ. ಇದರಿಂದಾಗಿ ತನಿಖೆ ಸ್ವಲ್ಪ ವಿಳಂಬಗೊಂಡಿತ್ತು. ಇದೀಗ ತನಿಖೆ ಮತ್ತೆ ಚುರುಕಾಗಿದ್ದು, ಮುಂದಿನ ಜನವರಿ ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಸಿಬಿಐ ಪರ ವಕೀಲರ ಮಾಹಿತಿ ದಾಖಲಿಸಿಕೊಂಡ ಪೀಠ ಡಿಸೆಂಬರ್ 7ರ ಒಳಗೆ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಇದೇ ವೇಳೆ ಸರ್ಕಾರಕ್ಕೆ ಸೂಚನೆ ನೀಡಿದ ಪೀಠ ಠೇವಣಿದಾರರಿಗೆ ಹಣ ಮರುಪಾವತಿ ಮಾಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿತು.