ಬೆಂಗಳೂರು: ನಗರದ ಸಿಟಿ ಸ್ಪೋರ್ಟ್ಸ್ ಅಸೋಸಿಯೇಷನ್ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ, ಕ್ಲಬ್ ಮಾಲೀಕ ಮಂಜುನಾಥ ಸೇರಿದಂತೆ 22 ಜನರನ್ನು ಬಂಧಿಸಿ 1.17 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಉಪ್ಪಾರಪೇಟೆ ಆಸ್ಪತ್ರೆ ರಸ್ತೆಯಲ್ಲಿರುವ ಬೆಂಗಳೂರು ಸಿಟಿ ಸ್ಪೋರ್ಟ್ಸ್ ಅಸೋಸಿಯೇಷನ್ ಕ್ಲಬ್‌ನಲ್ಲಿ ಸದಸ್ಯರಲ್ಲದ ವ್ಯಕ್ತಿಗಳನ್ನು ಸೇರಿಸಿಕೊಂಡು ಜೂಜಾಟ ಆಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 22 ಜನರನ್ನು ಬಂಧಿಸಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ ಬಂಧನ:
ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ, 1.06 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಓಕಳಿಪುರದ ಆಯೂಬ್ ಬಂಧಿತ ಆರೋಪಿ. ಅ. 22ರಂದು ನಡೆದ ಭಾರತ ಮತ್ತು ಸೌತ್ ಆಫ್ರಿಕಾ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿ ಸಂಬಂಧ ವಿವಿಧ ವೆಬ್ಸೈಟ್ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ್ದರಂತೆ. ಸಾರ್ವಜನಿಕರಿಂದ ಹಣ ಪಡೆದಿರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ 1,06,300 ರೂ. ನಗದು ಹಾಗೂ ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕೆ.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.