ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಬೆಳಕಿಗೆ ಬಂದ ವೇಳೆ ಯುವತಿ ಪರವಾಗಿ ದಿನೇಶ್ ಕಲ್ಲಹಳ್ಳಿ ಸಲ್ಲಿಸಿದ್ದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸದಿದ್ದಕ್ಕೆ ನಗರ ಪೊಲೀಸ್ ಆಯುಕ್ತರ ವಿರುದ್ಧ ತನಿಖೆಗೆ ಆದೇಶಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಇದರಿಂದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಕೇಂದ್ರ ವಿಭಾಗದ ಡಿಸಿಪಿ ಎಂ ಎನ್ ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಇನ್ಸಪೆಕ್ಟರ್ ಬಿ.ಮಾರುತಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ತಮ್ಮ ವಿರುದ್ಧ ತನಿಖೆಗೆ ನಿರ್ದೇಶಿಸಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಮೂವರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ಪ್ರಸನ್ನಕುಮಾರ್ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತನಿಖೆ ನಡೆಸಿದ್ದು, ಅಂತಿಮ ವರದಿ ಸಲ್ಲಿಸಲು ಎಸ್ಐಟಿ ಸಿದ್ಧವಿದೆ. ಹೀಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ತನಿಖೆ ನಡೆಸಲು ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದ್ದನ್ನು ಪರಿಗಣಿಸಿದ ಪೀಠ ಮಧ್ಯಂತರ ತಡೆ ನೀಡಿದೆ.
ಪ್ರಕರಣದ ಹಿನ್ನೆಲೆ:
ಸಿಡಿ ಪ್ರಕರಣ ಬೆಳಕಿಗೆ ಬಂದ ವೇಳೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ. ಇದು ಐಪಿಸಿ ಸೆಕ್ಷನ್ 166(ಎ) ಅಡಿ ಅಪರಾಧ ಎಂದು ಜನಾಧಿಕಾರ ಸಂಘರ್ಷ ಪರಿಷತ್ ಮುಖ್ಯಸ್ಥ ಆದರ್ಶ ಬಿ ಅಯ್ಯರ್ ನಗರದ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ನಗರ ಪೊಲೀಸ್ ಆಯುಕ್ತ, ಕೇಂದ್ರ ವಿಭಾಗದ ಡಿಸಿಪಿ ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರ ವಿರುದ್ಧ ಸಿಆರ್ ಪಿಸಿ ಸೆಕ್ಷನ್ 153(ಎ) ಅಡಿ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ನ ಆದೇಶ ರದ್ದು ಕೋರಿ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.
(ಇದನ್ನೂ ಓದಿ: ಸಿಡಿ ಕೇಸ್ನಲ್ಲಿ ಅನಗತ್ಯ ಭಯ ಬೇಡ : ಹೈಕೋರ್ಟ್)