ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಎಚ್ಚರಿಕೆ ನೀಡಿದ್ದ ಟಿಕೆಟ್ ಆಕಾಂಕ್ಷಿಗಳಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಲಾಗಿದೆ.
ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ವಿರುದ್ಧ ಸ್ಪರ್ಧೆಗೆ ಸಿದ್ದವಾಗಿದ್ದ ಸಂಸದ ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡಗೆ ಗೃಹ ಮಂಡಳಿ ಅಧ್ಯಕ್ಷ ಸ್ಥಾನ,ವಿ ಎಸ್ ಪಾಟೀಲ್ಗೆ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನ, ನಂದೀಶ್ ರೆಡ್ಡಿಗೆ ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ, ಯು ಬಿ ಬಣಕಾರ್ಗೆ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣಾ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಕೇಂದ್ರ ಚುನಾವಣೆ ಆಯೋಗ ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳು, ತಮಗೇ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು. ಬೆಂಬಲಿಗರಿಂದಲೂ ಒತ್ತಡ ಹಾಕುತ್ತಿದ್ದರು. ಟಿಕೆಟ್ ಸಿಗದಿದ್ದರೆ ಬಂಡಾಯವೇಳುವ ಇಲ್ಲವೇ, ಬೇರೆ ಪಕ್ಷ ಸೇರುವ ಸಂದೇಶ ನೀಡಿದ್ದರು.
ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಬಂಡಾಯ ಎದುರಾದರೆ, ಉಪ ಚುನಾವಣೆಯಲ್ಲಿ ತೊಂದರೆಯಾಗುವುದನ್ನು ಅರಿತ ಮುಖ್ಯಮಂತ್ರಿ ಯಡಿಯೂರಪ್ಪ ಬಂಡಾಯ ಶಮನಕ್ಕೆ ನಿಗಮ ಮಂಡಳಿಗಳ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನ ನೀಡಿದ್ದಾರೆ.
ಮಸ್ಕಿ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಸವನಗೌಡ ತುರವಿಹಾಳ ಅವರಿಗೆ ಮುನಿರಾಬಾದ್-ರಾಯಚೂರು ಕಾಡಾ ಅಧ್ಯಕ್ಷರಾಗಿ ನೇಮಿಸಲಾಗಿದೆ. ಗೋಕಾಕ್ನ ಅಶೋಕ್ ಪೂಜಾರಿ ಅವರನ್ನ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕಾಗವಾಡ ಕ್ಷೇತ್ರದಲ್ಲಿ ಬಂಡಾಯದ ಮುನ್ಸೂಚನೆ ನೀಡಿದ್ದ ಮಾಜಿ ಶಾಸಕ ರಾಜು ಕಾಗೆ ಅವರಿಗೆ ಬೆಳಗಾವಿ ಕಾಡಾ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್ ಆರ್ ಗವಿಯಪ್ಪ ಅವರಿಗೆ ಸಣ್ಣ ಕೈಗಾರಿಕೆ ಅಭಿವೃದ್ದಿ ನಿಗಮದ ಉಪಾಧ್ಯಕ್ಷ ಸ್ಥಾನ ಕೊಡಲಾಗಿದೆ. ನಿಗಮ ಮಂಡಳಿಗೆ ನೇಮಕಗೊಂಡ ಈ ಎಲ್ಲಾ ಅಧ್ಯಕ್ಷ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ವಿ ಎಸ್ ಪಾಟೀಲ್ ಅವರಿಗೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.