ಬೆಂಗಳೂರು: ಮುಂದಿನ ಎರಡು ವಾರ ಕೊರೊನಾ ನಿಯಂತ್ರಣ ಮಹತ್ವದ್ದಾಗಿದ್ದು, ಕೊರೊನಾ ನಿರ್ವಹಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಸಹಕಾರ ನೀಡುವಂತೆ ಜನರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸಲು ಪಕ್ಷದ ಬೆಂಗಳೂರು ಜನಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬೆಂಗಳೂರು ಮಹಾನಗರ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೊರೊನಾ ವೇಗವಾಗಿ ಹರಡುತ್ತಿರುವ ಬಗ್ಗೆ ಚರ್ಚೆ ಮಾಡಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ನಾವೂ ಕೂಡ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.
ಇದಲ್ಲದೇ, ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಆ್ಯಂಬುಲೆನ್ಸ್ ವ್ಯವಸ್ಥೆ ನೋಡಿಕೊಳ್ಳುವುದು, ವ್ಯಾಕ್ಸಿನ್ ಕೊಡುವ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದ್ದೇನೆ. ಪಕ್ಷ ಮತ್ತು ಸರ್ಕಾರ ಒಟ್ಟಾಗಿ ಪರಿಸ್ಥಿತಿ ಎದುರಿಸಲು ನಿರ್ಧರಿಸಲಾಗಿದೆ ಎಂದರು.
ಟಫ್ ರೂಲ್ಸ್ ಜಾರಿಯಿಂದ ಕಾಂಗ್ರೆಸ್ ಪಾದಯಾತ್ರೆಗೆ ಕೊಕ್ಕೆ ವಿಚಾರ ಕುರಿತು ಪ್ರತಿಕ್ರಿಯೆಗೆ ಸಿಎಂ ಬಸವರಾಜ ಬೊಮ್ಮಾಯಿ ನಿರಾಕರಿಸಿದರು. ಬರೀ ಶಾಸಕರ ಸಭೆ ಬಗ್ಗೆ ಮಾತ್ರ ಮಾತಾಡಿ, ಬೇರೆ ಯಾವುದೇ ವಿಷಯಗಳ ಬಗ್ಗೆಯೂ ಮಾತಾಡದೆ ಸಿಎಂ ನಿರ್ಗಮಿಸಿದರು.
ಇದನ್ನೂ ಓದಿ: ಹಾಸನದಲ್ಲಿ ತಮಿಳುನಾಡು ಪೊಲೀಸರಿಂದ ಸಿನಿಮೀಯ ಶೈಲಿ ಕಾರು ಚೇಸ್ : AIADMKಯ ಮಾಜಿ ಸಚಿವ ರಾಜೇಂದ್ರ ಬಾಲಾಜಿ ಬಂಧನ