ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಕಾಣಿಸಿಕೊಂಡ ಕಾರಣ ಅವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಅಧಿಕಾರ ಸ್ವೀಕರಿಸಿದ ಮೂರೇ ದಿನಕ್ಕೆ ಹೋಂ ಕ್ವಾರಂಟೈನ್ ಆಗಿದ್ದಾರೆ.
ಅಧಿಕಾರ ಸ್ವೀಕಾರ ಮಾಡಿದ ತಕ್ಷಣ ನಗರ ಆಯುಕ್ತರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ್ದರು. ನಿನ್ನೆ ಸಿಎಂ ಬಿಎಸ್ವೈ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ, ಪ್ರಾಥಮಿಕ ಸಂಪರ್ಕ ಇರುವ ಕಾರಣ ಕಮಲ್ ಪಂತ್ ಐದು ದಿನ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಸಿಬ್ಬಂದಿ ಜೊತೆ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ.
ಪ್ರತಿ ದಿನವೂ ಪೊಲೀಸ್ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಜ್ಯದ ವರದಿ ನೀಡಲು ಸಿಎಂ ನಿವಾಸಕ್ಕೆ ತೆರಳುತ್ತಿದ್ದ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಕೂಡ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಯಾರನ್ನೂ ಭೇಟಿಯಾಗದೆ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ.