ಬೆಂಗಳೂರು: ರಾಜ್ಯದ ಹಣಕಾಸಿನ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದು, ಹಣಕಾಸು ಪರಿಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟದ ಸಹದ್ಯೋಗಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದರು. ಲಾಕ್‌ಡೌನ್ ಸಡಿಲಗೊಳಿಸುವ ಸಾಧ್ಯತೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳು ಬಂದವು. ಅವುಗಳನ್ನು ಜಾರಿಗೊಳಿಸಲು ತೀರ್ಮಾನಿಸಲಾಯಿತು.
ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಇಂದಿನ ಸಭೆಯಲ್ಲಿ ಲಾಕ್‌ಡೌನ್ ಸಡಿಲಗೊಳಿಸುವ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚೆ ನಡೆಸಲಾಯಿತು. ಪ್ರಧಾನಿ ಮೋದಿ ಸೂಚನೆ ಬಳಿಕ ಉಳಿದ ತೀರ್ಮಾನ ಮಾಡುತ್ತೇವೆ ಎಂದರು. ಕೋವಿಡ್-19ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತವಾಗಿದೆ. ಇದನ್ನು ಸರಿದೂಗಿಸಲು ಹಲವು ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಅನಧಿಕೃತ ಕಟ್ಟಡಗಳ ತೆರವು ಮಾಡಿ
ಬಿಡಿಎ ವ್ಯಾಪ್ತಿಯ 12 ಸಾವಿರ ಕಾರ್ನರ್ ಸೈಟ್ ಮಾರಾಟಕ್ಕೆ ನಿರ್ಧರಿಸಲಾಗಿದೆ. ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುತ್ತದೆ. ಮಾರುಕಟ್ಟೆ ಬೆಲೆ ಸಿಕ್ಕರೆ ಮಾತ್ರ ಮಾರಾಟ ಮಾಡಲಾಗುತ್ತದೆ. ಇದರಿಂದ ಒಂದಷ್ಟು ಆರ್ಥಿಕ ಹೊರೆ ಕಡಿಮೆಯಾಗಲಿದೆ. ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲೆ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮ ವಹಿಸಲಾಗುವುದು ಎಂದರು.
ಹಾಲು ಪೂರೈಕೆ ಸಮಯ ವಿಸ್ತರಣೆ
ಏಪ್ರಿಲ್ 14ರವರೆಗೆ ರಾಜ್ಯದ ಬಡವರು ಹಾಗೂ ಸ್ಲಂ ನಿವಾಸಿಗಳಿಗೆ ಉಚಿತ ಹಾಲು ಪೂರೈಕೆ ಮಾಡಲು ನೀಡಿದ್ದ ಆದೇಶವನ್ನು ಮತ್ತೊಂದು ವಾರಕ್ಕೆ ವಿಸ್ತರಣೆ ಮಾಡಲಾಗುತ್ತದೆ. ಮುಂದಿನ ಒಂದು ವಾರ ಉಚಿತ ಹಾಲು ಕೊಡಲು ತೀರ್ಮಾನಿಸಲಾಗಿದೆ ಎಂದರು.
ಕಬ್ಬು ಬೆಳಗಾರರ ಬಾಕಿ ಹಣ ನೀಡುವಂತೆ ಸೂಚನೆ
11 ಜಿಲ್ಲೆಗಳಲ್ಲಿ 2834 ಕೋಟಿ ಹಣವನ್ನು ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ. ಕೂಡಲೇ ಬಾಕಿ ಉಳಿಸಿಕೊಂಡ ಹಣವನ್ನು ರೈತರಿಗೆ ಕೊಡುವಂತೆ ಸೂಚನೆ ನೀಡಿದ್ದೇನೆ. ಒಂದು ವೇಳೆ ಬಾಕಿ ಹಣ ಕೊಟ್ಟಿಲ್ಲ ಅಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ಬಿಎಸ್ವೈ ಎಚ್ಚರಿಕೆ ನೀಡಿದರು.
ಅನಧಿಕೃತ ಕಟ್ಟಡಗಳ ಪ್ರಕರಣಗಳ ತ್ವರಿತ ವಿಲೇವಾರಿ
ಅನಧಿಕೃತ ಕಟ್ಟಡಗಳ ಕುರಿತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರಯತ್ನಿಸುವಂತೆ ಸೂಚಿಸಲಾಗಿದೆ. ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥವಾದರೆ ನಾಗರಿಕರಿಗೂ ಅನುಕೂಲವಾಗಲಿದೆ. ರಾಜ್ಯಕ್ಕೂ ಸಂಪನ್ಮೂಲ ದೊರೆಯಲಿದೆ ಎಂದರು.
ಬಡಾವಣೆ ನಿರ್ಮಾಣಕ್ಕೆ ಕಾನೂನು ತಿದ್ದುಪಡಿ
ಖಾಸಗಿ ಮತ್ತು ಸಹಕಾರಿ ಸಂಘಗಳ ಬಡಾವಣೆ ನಿರ್ಮಾಣ ಹಾಗೂ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಅನುಮತಿಗೆ ಕಾಯುತ್ತಿರುವ ನೂರಾರು ವಸತಿ ನಿರ್ಮಾಣ ಸೊಸೈಟಿಗಳಿಗೆ ಅನುಮತಿ ನೀಡಲು ಸಾಧ್ಯವಾಗುತ್ತದೆ ಎಂದರು.
ವೈದ್ಯಕೀಯ ಕಾಲೇಜುಗಳ ಅಭಿವೃದ್ಧಿ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ 1000 ಕೋಟಿ ರೂಪಾಯಿಗಳನ್ನು ವೈದ್ಯಕೀಯ ಕಾಲೇಜುಗಳ ಮೂಲ ಸೌಲಭ್ಯ ಅಭಿವೃದ್ಧಿಗೆ ಬಳಸಲು ತೀರ್ಮಾನಿಸಲಾಯಿತು. ಪ್ರಸ್ತುತ ಕೋವಿಡ್-19ಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಪೋರ್ಟಲ್ಗಳನ್ನು ನಿರ್ವಹಿಸಲಾಗುತ್ತಿದ್ದು, ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಯಿತು ಎಂದು ಸಿಎಂ ಮಾಹಿತಿ ನೀಡಿದರು.