ಬೆಂಗಳೂರು: ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಫೋಟೋಗೇ ಮಾಲಾರ್ಪಣೆ ಮಾಡುವ ಮೂಲಕ ರಾಷ್ಟ್ರೀಯ ಕ್ರೀಡಾ ದಿನಾಚರಣೆಗೆ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಆಗಸ್ಟ್ 29ರಂದು ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ಪ್ರತಿವರ್ಷ ರಾಷ್ಟ್ರೀಯ ಕ್ರೀಡಾ ಹಬ್ಬವಾಗಿ ಆಚರಿಸಲಾಗುತ್ತಿದೆ. ಅಲ್ಲದೆ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮವನ್ನು ವಿಧಾನಸೌಧದ ಮುಂಭಾಗ ಆಯೋಜಿಸಿದ್ದೇವೆ. ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಇದೇ ವೇಳೆ ಪ್ಯಾರಾ ಬ್ಯಾಡ್ಮಿಂಟನ್ನಲ್ಲಿ ಚಿನ್ನದ ಪದಕ ಗಳಿಸಿದ ಮಾನಸ ಜೋಶಿ ಹಾಗೂ ವಿಶ್ವ ಬ್ಯಾಡ್ಮಿಂಟನ್ ಚಿನ್ನದ ಪದಕ ಗಳಿಸಿ ದೇಶದ ಕೀರ್ತಿ ಹೆಚ್ಚಿಸಿದ ಪಿ ವಿ ಸಿಂಧು ಅವರ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದು ಹೇಳಿ ಅಭಿನಂದನೆ ತಿಳಿಸಿದರು.
ನಮ್ಮ ಸರ್ಕಾರ ಕ್ರೀಡಾಪಟುಗಳಿಗೆ ಅಗತ್ಯವಿರುವ ವಿಶೇಷ ಹಣಕಾಸಿನ ನೆರವು ನೀಡಲು ಚಿಂತನೆ ಮಾಡುತ್ತೇವೆ. ಇದರಿಂದ ನಮ್ಮ ಕ್ರೀಡಾಪಟುಗಳು ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಕ್ರೀಡಾಪಟುಗಳಲ್ಲಿ ಆತ್ಮವಿಶ್ವಾಸ ತುಂಬಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಪ್ರವಾಸೋದ್ಯಮ ಸಚಿವ ಸಿಟಿ ರವಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಕಿ ಬಾಲ್ ಅನ್ನು ಗೋಲ್ಗೆ ತಳ್ಳಿ ಖುಷಿ ಪಟ್ಟರು. ಜೊತೆಗೆ ಕ್ರೀಡಾಪಟುಗಳ ಜೊತೆ ಫೋಟೋಗೆ ಪೋಸ್ ಕೊಟ್ಟರು.