ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ ಸೇರಿದಂತೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಕುರಿತು ತಜ್ಞರ ಸಮಿತಿಯ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ತಜ್ಞರ ಸಮಿತಿಯ ಸದಸ್ಯರು ಭಾಗವಹಿಸಿದ್ದಾರೆ.
ಕರ್ನಾಟಕದ ಗಡಿ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರಸ್ತುತ ಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ.
ಒಮಿಕ್ರಾನ್ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಗೊಳಿಸುವ ಅಗತ್ಯವಿದೆಯಾ?, ಗಡಿಯಲ್ಲಿ ಹೇಗೆ ಕಟ್ಟೆಚ್ಚರ ವಹಿಸಬೇಕು, ಧಾರ್ಮಿಕ ಚಟುವಟಿಕೆ, ಮದುವೆ, ಸಭೆ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ,ಕೋವಿಡ್ ವ್ಯಾಕ್ಸಿನ್ ಅಭಿಯಾನ ಚುರುಕು ಎನ್ನುವುದು ಸೇರಿದಂತೆ ಕಠಿಣ ನಿಯಮಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವುದಕ್ಕೆ ಮತ್ತು ವೃದ್ಧರು, ಅರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಕೊಡಲು ಪ್ರಧಾನಿ ಮೋದಿ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ರಾಜ್ಯದಲ್ಲಿ ಹೇಗೆ ಮುಂದುವರೆಯಬೇಕು ಎಂಬ ಕುರಿತು ಚರ್ಚೆ ನಡೆಯುತ್ತಿದೆ.