ಬೆಂಗಳೂರು: ರಾಜ್ಯದಲ್ಲಿ ವಿಧಿಸಲಾಗಿರುವ ಕೋವಿಡ್ ಕಠಿಣ ನಿಯಮಗಳ ಸಡಿಲಿಕೆ ಕುರಿತು ರಾಜ್ಯ ಸರ್ಕಾರದಿಂದ ಇಂದು ಮಹತ್ವದ ನಿರ್ಧಾರ ಹೊರಬೀಳಲಿದೆ. ವೀಕೆಂಡ್ ಕರ್ಫ್ಯೂ ಭವಿಷ್ಯ, ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಸೀಟ್ ಬಗ್ಗೆ ನಿರ್ಧಾರ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮಗೊಳ್ಳಲಿದ್ದು, ಸಭೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.
ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್-19 ಕುರಿತು ಸಭೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ.
ಕರ್ಫ್ಯೂಗೆ ವ್ಯಾಪಕ ವಿರೋಧ: ವೀಕೆಂಡ್ ಕರ್ಫ್ಯೂ ಬಗ್ಗೆ ಜನತೆ ನಕಾರಾತ್ಮಕ ನಿಲುವು ವ್ಯಕ್ತಪಡಿಸಿದ್ದು, ಕೆಲವೆಡೆ ಆಕ್ರೋಶವೂ ವ್ಯಕ್ತವಾಗಿದೆ. ಆಡಳಿತಾರೂಢ ಬಿಜೆಪಿಯ ಕೆಲ ನಾಯಕರು ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಕೂಡ ವೀಕೆಂಡ್ ಕರ್ಫ್ಯೂಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿನಿಮಾ ಮಂದಿರ, ಹೋಟೆಲ್, ಮಾಲ್ ಸೇರಿದಂತೆ ಬಹುತೇಕ ಎಲ್ಲ ವರ್ಗದ ವ್ಯಾಪಾರ ವಹಿವಾಟ ವಾರಾಂತ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ನಡೆಯಲಿದ್ದು ಕರ್ಫ್ಯೂ ಕಾರಣದಿಂದ ನಷ್ಟಕ್ಕೊಳಗಾಗುತ್ತಿದ್ದೇವೆ ಎಂದು ವರ್ತಕರು ಅಸಮಾಧಾನ ವ್ಯಕ್ತಪಡಿಸಿ ಕರ್ಫ್ಯೂ ವಾಪಸ್ ಗೆ ಬೇಡಿಕೆ ಇರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಿಂಗಳಾಂತ್ಯದವರೆಗೆ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಆದೇಶದ ಪುನರ್ ಪರಿಶೀಲನೆ ನಡೆಸಲಾಗುತ್ತದೆ. ಸಾಧಕ ಬಾಧಕ ಕುರಿತು ಚರ್ಚಿಸಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬೇಕೋ ಬೇಡವೋ ಎನ್ನುವ ನಿರ್ಧಾರವನ್ನು ಇಂದು ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ: ಜನರಿಗೆ ಕಷ್ಟ ಕೊಡುವುದು ನಮ್ಮ ಉದ್ದೇಶವಲ್ಲ, ವೀಕೆಂಡ್ ಕರ್ಫ್ಯೂ ವಿನಾಯಿತಿ ಬಗ್ಗೆ ನಾಳೆ ನಿರ್ಧಾರ : ಸುಧಾಕರ್
ನಿರ್ಬಂಧದ ಬಗ್ಗೆ ಸುದೀರ್ಘ ಸಮಾಲೋಚನೆ: ಬೆಂಗಳೂರಿನಲ್ಲಿ ಎಸ್.ಎಸ್.ಎಲ್.ಸಿಯಿಂದ ದ್ವಿತೀಯ ಪಿಯುಸಿ ಮತ್ತು ನರ್ಸಿಂಗ್, ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ ಇತರ ಎಲ್ಲ ಶಾಲಾ ಕಾಲೇಜುಗಳ ಭೌತಿಕ ತರಗತಿಗಳನ್ನು ಮುಚ್ಚಲಾಗಿದ್ದು, ರಾಜ್ಯಾದ್ಯಂತ ಇದನ್ನು ವಿಸ್ತರಿಸುವ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಸರ್ಕಾರದ ಅಭಿಪ್ರಾಯ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಲಹೆ ಪಡೆದು ಕೋವಿಡ್ ನಿಯಮದಲ್ಲಿ ಸಡಿಲಿಕೆ ಮಾಡುವ ನಿರ್ಧಾರಕ್ಕೆ ಬರಲಾಗುತ್ತದೆ. ಬಹುತೇಕ ಇಂದಿನ ಸಭೆಯಲ್ಲಿ ವಾರಂತ್ಯ ಕರ್ಫ್ಯೂ ತೆರವುಗೊಳಿಸುವ ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆಯೇ ಹೆಚ್ಚಿದೆ ಎನ್ನಲಾಗುತ್ತಿದೆ.
ಸಭೆಗೂ ಮುನ್ನ ಸಿದ್ದಗಂಗಾ ಮಠಕ್ಕೆ ಸಿಎಂ ಭೇಟಿ: ಇಂದು ಮಧ್ಯಾಹ್ನ ಕೋವಿಡ್ ಸಭೆ ನಿಗದಿಯಾಗಿದ್ದರೂ ಅದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳುತ್ತಿದ್ದಾರೆ. ಬೆಳಗ್ಗೆ 9 ಗಂಟೆಗೆ ರಸ್ತೆ ಮಾರ್ಗವಾಗಿ ತುಮಕೂರಿಗೆ ತೆರಳಲಿರುವ ಸಿಎಂ, 10 ಗಂಟೆಗೆ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ದಾಸೋಹ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10.30 ಕ್ಕೆ ಕಾರ್ಯಕ್ರಮ ಮುಗಿಸಿ, 11.30 ಕ್ಕೆ ಬೆಂಗಳೂರಿಗೆ ಸಿಎಂ ಮರಳಲಿದ್ದಾರೆ.
(ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ)