ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ಘೋಷಣೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕೇಂದ್ರದ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಿರುವ ಸಿಎಂ ನಾಳೆ ನವದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಪ್ರವಾಸದ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಾಳೆ ಬೆಳಗ್ಗೆ 9.45 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಲಿದ್ದಾರೆ. ಮಧ್ಯಾಹ್ನ 12:40 ಕ್ಕೆ ನವದೆಹಲಿ ತಲುಪಲಿರುವ ಸಿಎಂ, ಕೇಂದ್ರದ ಸಚಿವರನ್ನು ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಸಂಬಂಧಪಟ್ಟ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಜಲ ಸಂಪನ್ಮೂಲ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಹೆಚ್ಚಿನ ಮಾತುಕತೆ ನಡೆಯಲಿದೆ ಎನ್ನಲಾಗುತ್ತಿದೆ.
ನಾಳೆ ಸಂಜೆ ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿಗಳು ನಾಳೆ ರಾತ್ರಿ ನವದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ರಾಜ್ಯದಲ್ಲಿ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆ ಮತ್ತು ಬಿಟ್ ಕಾಯಿನ್ ವಿವಾದ ಬಿಜೆಪಿಗೆ ಸುತ್ತಿ ಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರೊಂದಿಗೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗೆ ಹೊಸದಾಗಿ ನೇಮಕ ಮಾಡುವ ಕುರಿತು ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಇದೇ ವೇಳೆ ಉಪಚುನಾವಣೆ ಕುರಿತು ವರಿಷ್ಠರಿಗೆ ಸಿಎಂ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.