ಬೆಂಗಳೂರು: ಬಿಜೆಪಿ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ನಾಳೆ ದೆಹಲಿಗೆ ಪ್ರಯಾಣಿಸಲಿದ್ದಾರೆ.
ನಾಳೆ ಬೆಳಗ್ಗೆ 8.20ಕ್ಕೆ ಸಿಎಂ ದೆಹಲಿಗೆ ತೆರಳಲಿದ್ದು, ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ವರಿಷ್ಠರ ಬುಲಾವ್ ಇದೀಗ ಹಲವು ಕುತೂಹಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಸಂಪುಟ ವಿಸ್ತರಣೆಗೆ ಮರುಜೀವ ಬಂದಂತಾಗಿದೆ. ಸಿಎಂ ಬಿಎಸ್ವೈ ಕೇಂದ್ರ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆಗೆ ಸಿಎಂ ಉದ್ದೇಶಿಸಿದ್ದು, ದೆಹಲಿ ಭೇಟಿ ವೇಳೆ ಬಹು ನಿರೀಕ್ಷಿತ ಸಂಪುಟ ವಿಸ್ತರಣೆಗೆ ಒಪ್ಪಿಗೆ ಕೇಳುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಇದರ ಜೊತೆಗೆ ಬೆಳಗಾವಿ ಮತ್ತು ಬಸವಕಲ್ಯಾಣ ಉಪ ಚುನಾವಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಉಪ ಸಮರದ ದಿನಾಂಕ ಘೋಷಣೆಯಾಗಲಿದ್ದು, ಈ ಸಂಬಂಧ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಓದಿ-ಕೆಡಿಪಿ ಸಭೆಯಲ್ಲಿ ಶಾಸಕ ಸಂಗಮೇಶರನ್ನು ಕಿಚಾಯಿಸಿದ ಸಚಿವ ಈಶ್ವರಪ್ಪ
ಈ ಮುಂಚೆ ಎರಡು ಬಾರಿ ಹೈಕಮಾಂಡ್ ಭೇಟಿಗಾಗಿ ಸಿಎಂ ದೆಹಲಿಗೆ ತೆರಳಿದ್ದರು. ಆದರೆ ಸಿಎಂಗೆ ಅಮಿತ್ ಶಾ ಭೇಟಿ ಸಾಧ್ಯವಾಗಿರಲಿಲ್ಲ. ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆಯಲು ಸಾಧ್ಯವಾಗಿರಲಿಲ್ಲ. ಇದೀಗ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿರುವುದರಿಂದ ಸಾಕಷ್ಟು ಕುತೂಹಲ ಕೆರಳಿಸಿದೆ.
ಉಪ ಸಮರದ ಮುನ್ನ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ಜೊತೆಗೆ ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಸಿಎಂ ಮನವಿ ಮಾಡಲಿದ್ದಾರೆ.