ಬೆಂಗಳೂರು: ರಾಜ್ಯದಲ್ಲಿ ಪ್ರತಿಭಟನೆ ಹೆಸರಲ್ಲಿ ಶಾಂತಿ ಕದಡುವವರ ಬಗ್ಗೆ ಎಚ್ಚರ ವಹಿಸಿ ಅಂಥವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜುಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಭೆ ನಡೆಸಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ರಾಜ್ಯದ ಕೆಲವೆಡೆ ಇಂದು ಪ್ರತಿಭಟನೆ ಹಿನ್ನೆಲೆ ಸೂಕ್ತ ಕ್ರಮ ವಹಿಸಿ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಹಾಗೂ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಸೂಚನೆ ನೀಡಿದರು. ಪ್ರತಿಭಟನೆ ಹೆಸರಲ್ಲಿ ಶಾಂತಿ ಕದಡುವವರ ಬಗ್ಗೆ ಎಚ್ಚರ ವಹಿಸಿ ಅಂಥವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಿ. ಈಗಾಗಲೇ ಪೌರತ್ವ ಕಾಯ್ದೆ ವಿರುದ್ದ ಬೇರೆ ಬೇರೆ ರಾಜ್ಯಗಳಲ್ಲಿ ಪ್ರತಿಭಟನೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಆ ರೀತಿಯ ವಾತಾವರಣ ಸೃಷ್ಟಿ ಆಗೋದು ಬೇಡ. ಈ ನಿಟ್ಟಿನಲ್ಲಿ ಜಾಗರೂಕತೆಯಿಂದ ಕ್ರಮ ವಹಿಸಿ ಎಂದು ಸೂಚನೆ ನೀಡಿದ್ದಾರೆ.