ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ 3.30 ಕ್ಕೆ ಬೆಂಗಳೂರು ನಗರ ಜಿಲ್ಲೆಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಅನುಷ್ಠಾನದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಜಿಲ್ಲಾ ಪಂಚಾಯಿತಿಯ ಮುಖ್ಯದ್ವಾರ ಮತ್ತು ಸಂಪನ್ಮೂಲ ಕೇಂದ್ರ ಕಟ್ಟಡದ ಉದ್ಘಾಟನೆ ನೆರವೇರಿಸುವರು.
ವೇದಿಕೆ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ರಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಡಿ.ವಿ.ಸದಾನಂದಗೌಡ, ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಸೇರಿದಂತೆ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಲೋಕಸಭಾ ಸದಸ್ಯರು, ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು, ಮತ್ತು ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಭಾಗವಹಿಸಿಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಗಳಾದ ಕೆ. ಶಿವರಾಮೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.