ಬೆಂಗಳೂರು: ರಾಜ್ಯದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆರೆಹಾನಿ ಸಂಭವಿಸುತ್ತಿದ್ದು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕ್ಷೇತ್ರದಲ್ಲಿದ್ದು ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ರಾಜ್ಯದ ಅನೇಕ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಮತ್ತು ಶಾಸಕರು ತಮ್ಮ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳಲ್ಲಿ ಉಪಸ್ಥಿತರಿದ್ದು ಜನರಿಗೆ ನೆರವಾಗಬೇಕು. ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಇದನ್ನೂ ಓದಿ: ನದಿಪಾತ್ರದ ಹಳ್ಳಿಗಳ ಮೇಲೆ ನಿಗಾ ಇರಿಸಲು ಬೆಳಗಾವಿ ಡಿಸಿಗೆ ಸಿಎಂ ಸೂಚನೆ
ಸತತ ಮಳೆಯಿಂದ ಪ್ರವಾಹದ ಪರಿಸ್ಥಿತಿ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದೇನೆ. ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ಜನ, ಜಾನುವಾರುಗಳ ಸುರಕ್ಷತೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿರುವುದಾಗಿ ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.