ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸದಲ್ಲಿ ಇಂದು ಮಹತ್ವದ ಸಭೆ ಆರಂಭಗೊಂಡಿದೆ. ಪರ್ಯಾಯ ವ್ಯವಸ್ಥೆ, ಕಾನೂನು ಕ್ರಮದಂತಹ ನಿರ್ಧಾರಗಳ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್ ಅಶೋಕ್, ಕಾನೂನು ಸಚಿವ ಮಾಧುಸ್ವಾಮಿ, ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಪಾಲ್ಗೊಂಡಿದ್ದಾರೆ.
ಕಳೆದ ರಾತ್ರಿ ನಡೆದ ಸಭೆಯಲ್ಲಿ ಪೊಲೀಸ್ ಭದ್ರತೆಯಲ್ಲಿ ಸಾರಿಗೆ ಸೇವೆ ಆರಂಭಗೊಳಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನಲ್ಲಿ ಹಂತ ಹಂತವಾಗಿ ಸಾರಿಗೆ ಸೇವೆಯನ್ನು ಪೊಲೀಸ್ ಭದ್ರತೆಯಲ್ಲಿ ಆರಂಭಿಸಿರುವ ಕುರಿತು ಸಚಿವರ ಜೊತೆ ಮಾತುಕತೆ ನಡೆಸಿದ್ದರು ಸಿಎಂ. ಇಂದು ಮತ್ತೆ ಬಸ್ ಸಂಚಾರ ಆರಂಭದ ಕುರಿತು ಇಂದು ಸಮಾಲೋಚನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರವನ್ನು ನಿಲ್ಲಿಸಬೇಕಿದೆ: ಕೋಡಿಹಳ್ಳಿ ಚಂದ್ರಶೇಖರ್
ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ತೊಂದರೆಯಾಗಬಾರದು. ಕೂಡಲೇ ಬಸ್ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪ ಸಾರಿಗೆ ಸಚಿವರಿಗೆ ಸೂಚನೆ ನೀಡಿದ್ದಾರೆ. ಅದಕ್ಕೆ ಅಗತ್ಯ ಪೊಲೀಸ್ ಭದ್ರತೆ ಕಲ್ಪಿಸುವಂತೆ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಿರ್ದೇಶನ ನೀಡಿದ್ದಾರೆ. ಮುಷ್ಕರ ಕೈಬಿಡದೇ ಇದ್ದಲ್ಲಿ ಎಸ್ಮಾ ಸೇರಿದಂತೆ ಯಾವ ರೀತಿ ಕಾನೂನು ಮೂಲಕ ಅಂಕುಶ ಹಾಕಬಹುದು ಎನ್ನುವ ಕುರಿತು ಕಾನೂನು ಸಚಿವ ಮಾಧುಸ್ವಾಮಿ ಜೊತೆ ಸಮಾಲೋಚಿಸುತ್ತಿದ್ದಾರೆ.