ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸಲು ಯುವ ಬ್ರಿಗೇಡ್ ಆರಂಭಿಸಿರುವ ಸ್ಪಾರ್ಕ್ ಯೋಜನೆಗೆ ಸಿಎಂ ಚಾಲನೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಈಗಾಗಲೇ ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಇದರ ಜೊತೆಗೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಳೆಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ವರದಿ ಕೊಡಲು ಸೂಚನೆ ನೀಡಿದ್ದೇನೆ. ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸವಿಸ್ತಾರವಾಗಿ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಭರವಸೆ ನೀಡಿದರು.
ಸ್ಪಾರ್ಕ್ ಯೋಜನೆ ಬಗ್ಗೆ ಮಾತನಾಡಿದ ಅವರು, ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಯೋಜನೆ ಇದಾಗಿದೆ. ಈ ಯೋಜನೆಗೆ ಸಂತೋಷದಿಂದ ಚಾಲನೆ ನೀಡಿದ್ದೇನೆ. ಅಬ್ದುಲ್ ಕಲಾಂ ಜನ್ಮದಿನದಂದೇ ಈ ಯೋಜನೆಗೆ ಚಾಲನೆ ನೀಡುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಯುವ ಬ್ರಿಗೇಡ್ ಆರಂಭಿಸಿರುವ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.