ಬೆಂಗಳೂರು : ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಸಿಎಂ ಪುತ್ರನ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಮೂಲಕ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.
ಕಳೆದ ಏಪ್ರಿಲ್‌ನಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿ ಮಾಡಿತ್ತು. ಅಗತ್ಯ ವಸ್ತುಗಳ ಖರೀದಿ ಹಾಗೂ ತುರ್ತು ಸೇವೆ ಹೊರತುಪಡಿಸಿ ಬೇರೆಲ್ಲದಕ್ಕೂ ನಿರ್ಬಂಧ ವಿಧಿಸಿತ್ತು.
ಈ ಮಧ್ಯೆ ಸಿಎಂ ಪುತ್ರ ವಿಜಯೇಂದ್ರ ತಮ್ಮ ಪತ್ನಿ ಹಾಗೂ ಕುಟುಂಬದೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದ್ದರು, ವಿಜಯೇಂದ್ರ ಅವರ ಈ ನಡವಳಿಕೆಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು.