ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.
ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ 691 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಭಾನುವಾರ ಒಂದೇ ದಿನ 196 ಕೇಸ್ಗಳು ಪತ್ತೆಯಾಗಿವೆ. ಬಹುತೇಕ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ ಎಂಬುದು ಆತಂಕಕಾರಿ ವಿಚಾರವಾಗಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಬಿಎಸ್ವೈ ತುರ್ತು ಸಭೆ ಕರೆದಿದ್ದು, ಈ ಸಭೆಗೆ ಬಿಬಿಎಂಪಿ ಮೇಯರ್, ಆರೋಗ್ಯಾಧಿಕಾರಿಗಳು, ಆರೋಗ್ಯ ಸಚಿವರು ಸೇರಿದಂತೆ ಸಂಬಂಧಪಟ್ಟವರು ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಕೊರೊನಾ ನಿಯಂತ್ರಣಕ್ಕೆ ಏನೆಲ್ಲಾ ಮಾಡಬಹುದು ಎನ್ನುವ ಕುರಿತು ಅಗತ್ಯ ಮಾಹಿತಿ, ಯೋಜನೆಗಳೊಂದಿಗೆ ಆಗಮಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿಗದಿತ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ, ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಕಲ್ಪಿಸುವ ಅಗತ್ಯತೆ, ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಸೇರಿದಂತೆ ಕೊರೊನಾ ನಿಯಂತ್ರಣ ಸಂಬಂಧ ಸಮಗ್ರ ಚರ್ಚೆ ನಡೆಯಲಿದೆ.