ಬೆಂಗಳೂರು: ಬಿಬಿಎಂಪಿಯ ಕೇಂದ್ರ ಕಚೇರಿಯ ಆವರಣ, ಮೇಯೊಹಾಲ್ ಸೇರಿದಂತೆ ನಗರದ ವಿವಿಧೆಡೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಫೋಟೋ ಇರುವ ಫ್ಲೆಕ್ಸ್ಗಳನ್ನು ಹಾಕಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬಿಬಿಎಂಪಿ ಫ್ಲೆಕ್ಸ್ಗಳನ್ನು ತೆರವುಗೊಳಿಸಿದೆ.
ಬೆಂಗಳೂರು ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ನಿಷೇಧವಾಗಿದೆ. ಪಾಲಿಕೆ ಈ ಬಗ್ಗೆ ಜಾಹಿರಾತು ಬೈಲಾವನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದೆ. ಆದರೂ ರಾಜ್ಯ ಸರ್ಕಾರದ ಕಾರ್ಯಕ್ರಮದ ಫ್ಲೆಕ್ಸ್ಗಳನ್ನು ನಗರದ ವಿವಿಧೆಡೆ ಹಾಕಿರುವುದು ವಿವಾದವಾಗಿದೆ. ಈ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡ ಬಿಬಿಎಂಪಿ ಅಧಿಕಾರಿಗಳು ಫ್ಲೆಕ್ಸ್ ತೆರವುಗೊಳಿಸಿದ್ದಾರೆ.
ನಗರದ ವಿವಿಧೆಡೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ತುರ್ತು ಸ್ಪಂದನ ಸಹಾಯ ವ್ಯವಸ್ಥೆಯ ಉದ್ಘಾಟನಾ ಸಮಾರಂಭದ ಫ್ಲೆಕ್ಸ್ ಗಳನ್ನು ಅಳವಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಫ್ಲೆಕ್ಸ್ ಅಳವಡಿಸಿದವರ ಮೇಲೆ ಎಫ್ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ವಿವರಣೆ ನೀಡುವಂತೆಯೂ ತಿಳಿಸಲಾಗಿದೆ. ಯಾರೇ ಫ್ಲೆಕ್ಸ್ ಅಳವಡಿಸಿದರೂ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಈ ಬಗ್ಗೆ ಸಾಮಾಜಿಕ ಹೋರಾಟಗಾರ ಸಾಯಿದತ್ತಾ ಕೂಡಾ ಪೊಲೀಸ್ ಕಮಿಷನರ್ ಹಾಗೂ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಫ್ಲೆಕ್ಸ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.