ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಸಿಲಿಕಾನ್ ಸಿಟಿಯ ಜನರೂ ಕೂಡ ಹುತಾತ್ಮ ವೀರಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ನಗರದ ಟೌನ್ ಹಾಲ್ ಬಳಿ ಶ್ರದ್ಧಾಂಜಲಿ ಸಭೆ ನಡೆಸಿದ ಪ್ರಗತಿಪರ ಚಿಂತಕರು, ಭಯೋತ್ಪಾದಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಕನ್ನಡಪರ ಸಂಘಟನೆಗಳು, ಆಟೋ ಚಾಲಕರು, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಲಯನ್ಸ್ ಕ್ಲಬ್, ವರ್ತಕರು, ವಿದ್ಯಾರ್ಥಿಗಳು, ಮಹಿಳೆಯರು ಸೇರಿ ವೀರಮರಣ ಹೊಂದಿದ ಸೈನಿಕರಿಗೆ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು.
ಹಾಗೆಯೇ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಹುತಾತ್ಮ ಸೈನಿಕರಿಗೆ ರಾಜಾಜಿನಗರದ ಶ್ರೀ ರಾಮ ಮಂದಿರ ಆಟದ ಮೈದಾನದಲ್ಲಿ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.