ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಾನೆಟ್ ಡಿಸೋಜಾ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಈರುಳ್ಳಿ ಹಾರ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸೆಲ್, ಈರುಳ್ಳಿ ಬೆಲೆ ಗಗನಕ್ಕೇರಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ. ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ದೇಶ- ವಿದೇಶ ಸುತ್ತುವುದನ್ನು ಬಿಟ್ಟು ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ. ಕೇಂದ್ರ ಸರ್ಕಾರವು ಕರ್ನಾಟಕದ ನೆರೆ ಪೀಡಿತ ಪ್ರದೇಶಗಳ ಬಗ್ಗೆ ಗಮನ ಹರಿಸಿ, ಸೂಕ್ತ ಪರಿಹಾರ ಕಾರ್ಯ ನೀಡಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಈ ವೇಳೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರ್ನಾಥ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಭಾಗವಹಿಸಿದ್ದರು.