ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ವಿ.ರಾಮಕೃಷ್ಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮತ್ತಿತರ ನಾಯಕರು ಸಂತಾಪ ಸೂಚಿಸಿದ್ದಾರೆ.
ಡಿಕೆಶಿ ತಮ್ಮ ಸಂತಾಪ ಸಂದೇಶದಲ್ಲಿ, 'ವಿ.ರಾಮಕೃಷ್ಣ ಅವರು ಹಿರಿಯ ನಾಯಕರು. ಪಕ್ಷಕ್ಕೆ ಅವರ ಸೇವೆ ಅಪಾರವಾಗಿದ್ದು, ವೀರಪ್ಪ ಮೊಯ್ಲಿ ಅವರ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಆತ್ಮಕ್ಕೆ ಶಾಂತಿ ಸಿಗಲಿ. ಅವರ ನಿಧನದ ನೋವನ್ನು ಕುಟುಂಬ ಸದಸ್ಯರು ಹಾಗೂ ಅವರ ಅಭಿಮಾನಿಗಳಿಗೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದು, ವಿ.ರಾಮಕೃಷ್ಣರವರು ಸರಳತೆ ಹಾಗೂ ಸಜ್ಜನಿಕೆಗೆ ಹೆಸರಾದಂತವರು ಎಂದು ಕೊಂಡಾಡಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವರು, ಶಾಸಕರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ವಿ. ರಾಮಕೃಷ್ಣ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.