ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಪಕ್ಷ ಆರಂಭಿಸಿದೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಧ್ರುವನಾರಾಯಣ್, ಎಂಎಲ್ಸಿ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಶಕುಂತಳಾ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
ಸ್ಥಳೀಯ ನಗರ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಹಾಗೂ ಸಂಸದೀಯ ಜನ ಪ್ರತಿನಿಧಿಗಳಿಂದ ವಿಧಾನ ಪರಿಷತ್ತಿನ 25 ಸದಸ್ಯ ಸ್ಥಾನಗಳಿಗೆ 2021ರ ಡಿಸೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ 4 ಸದಸ್ಯ ಸ್ಥಾನಗಳಿಗೆ 2022 ರ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ.
ಪ್ರಸ್ತುತ ಹಾಲಿ ಸದಸ್ಯರ ಅವಧಿಯು ಕ್ರಮವಾಗಿ 2022 ರ ಜನವರಿ 5 ರಂದು ಹಾಗೂ 2022 ರ ಜುಲೈ 4 ರಂದು ಕೊನೆಗೊಳ್ಳಲಿದೆ. ಆದ್ದರಿಂದ ಈ ಚುನಾವಣೆಗಳ ಸಂಬಂಧ ಪೂರ್ವಭಾವಿ ಸಿದ್ಧತಾ ಕ್ರಮಗಳ ಬಗ್ಗೆ ಚರ್ಚಿಸುವ ಸಲುವಾಗಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, 2018 ಮತ್ತು 2019ರ ಚುನಾವಣಾ ಅಭ್ಯರ್ಥಿಗಳು, ಸ್ಥಳೀಯ ಸಂಸ್ಥೆಗಳ ಚುನಾವಣಾ ಕ್ಷೇತ್ರದ ಅಭ್ಯರ್ಥಿಗಳು, 2016 ರ ಕರ್ನಾಟಕ ವಾಯುವ್ಯ ಪದವೀಧರರ ಕ್ಷೇತ್ರ, ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ, ಕರ್ನಾಟಕ ವಾಯುವ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸಭೆಯನ್ನು ಆಯೋಜಿಸಲಾಗಿದೆ. ಇಂದು ಇಡೀ ದಿನ ಕೆಪಿಸಿಸಿ ಕಚೇರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸರಣಿ ಸಭೆ ನಡೆಯಲಿದೆ.