ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ದೂರವಾಣಿ ಕದ್ದಾಲಿಕೆ (Pegasus) ಪ್ರಕರಣ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಾಳೆ 'ರಾಜಭವನ ಮುತ್ತಿಗೆ'ಗೆ ನಿರ್ಧರಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಇ.ತುಕಾರಾಂ, ಲಜ್ಜೆಗೆಟ್ಟ ಕೇಂದ್ರ ಸರ್ಕಾರ ರಾಷ್ಟ್ರೀಯ ನಾಯಕರು, ಸುಪ್ರೀಂಕೋರ್ಟ್ ನ್ಯಾಯಾಧೀಶರು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ದೂರವಾಣಿ ಕದ್ದಾಲಿಕೆ ಮಾಡಿರುವುದು ಜಗಜ್ಜಾಹೀರಾಗಿದೆ. ಇದರ ವಿರುದ್ಧ ಪ್ರತಿಭಟಿಸುವ ಸಲುವಾಗಿ 'ರಾಜಭವನ ಮುತ್ತಿಗೆ'ಗೆ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ಪಕ್ಷದ ಎಲ್ಲಾ ಶಾಸಕರು ಗುರುವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಗೆ ಆಗಮಿಸುವಂತೆ ತಿಳಿಸಲಾಗಿದೆ.
ಈ ಮೆರವಣಿಗೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಸದ್ಯ ದಿಲ್ಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿ ನಿನ್ನೆ ರಾಷ್ಟ್ರೀಯ ನಾಯಕರು ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.
ಇದೀಗ ಪಕ್ಷದ ನಾಯಕರು ಡಿಟಿಎಚ್ ಪ್ರತಿಭಟನೆಗೆ ನಿರ್ಧಾರ ಕೈಗೊಂಡಿದ್ದು, ಇದಕ್ಕೆ ರಾಜ್ಯ ಸರ್ಕಾರ ಯಾವ ರೀತಿ ಅವಕಾಶ ಮಾಡಿಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: ಬೆಲ್ಲದ್, ಯತ್ನಾಳ್, ಬೊಮ್ಮಾಯಿ ಯಾರಾದರೂ ಓಕೆ, ವೀರಶೈವ ಲಿಂಗಾಯತರನ್ನೇ ಸಿಎಂ ಮಾಡಿ: ಶಾಂತವೀರ ಶ್ರೀ