ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಿಟ್ಟಗಾನಹಳ್ಳಿ ಕ್ವಾರಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಿದ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ. ಮುಖ್ಯವಾಗಿ ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ನಗರದ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಪೀಠಕ್ಕೆ ಬೇಷರತ್ ಕ್ಷಮೆ ಯಾಚಿಸಿ, ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿಲ್ಲ ಎಂದು ವಿವರಿಸಿ, ಈ ಸಂಬಂಧ ಪ್ರಮಾಣಪತ್ರ ಸಲ್ಲಿಸಿದರು.
ಪಾಲಿಕೆ ಆಯುಕ್ತರು ಬೇಷರತ್ ಕ್ಷಮೆ ಯಾಚಿಸಿ, ಈ ಕುರಿತಂತೆ ಸಲ್ಲಿಸಿರುವ ಪ್ರಮಾಣ ಪತ್ರ ಪರಿಗಣಿಸಿರುವ ಹೈಕೋರ್ಟ್ ಆಯುಕ್ತರ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಜರುಗಿಸಬೇಕಿದ್ದ ಕ್ರಮವನ್ನು ಕೈಬಿಟ್ಟಿದ್ದು, ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡುವಂತೆ ತಾಕೀತು ಮಾಡಿದೆ.
ಪ್ರಮಾಣಪತ್ರ ದಾಖಲಿಸಿಕೊಂಡ ಪೀಠ, ಆಯುಕ್ತರ ವಿರುದ್ಧ ಮುಂದಿನ ಕ್ರಮ ಜರುಗಿಸಲು ಬಯಸುವುದಿಲ್ಲ ಎಂದು ತಿಳಿಸಿತಲ್ಲದೆ, ಭವಿಷ್ಯದಲ್ಲಿ ಆಯುಕ್ತರು ಎಚ್ಚರಿಕೆಯಿಂದ ಇರಬೇಕು ಎಂದು ನಿರ್ದೇಶಿಸಿತು. ಅಲ್ಲದೇ, ತ್ಯಾಜ್ಯ ವಿಲೇವಾರಿ ಪ್ರಕರಣದಲ್ಲಿ ಹೈಕೋರ್ಟ್ ಈವರೆಗೂ ನೀಡಿರುವ ಆದೇಶಗಳಲ್ಲಿ ಸರ್ಕಾರ ಮತ್ತು ಬಿಬಿಎಂಪಿಗಳು ಎಷ್ಟು ಆದೇಶ ಪಾಲನೆ ಮಾಡಿವೆ. ಎಷ್ಟು ಆದೇಶಗಳನ್ನು ಪಾಲನೆ ಮಾಡಿಲ್ಲ ಎಂಬ ಕುರಿತಂತೆ ಸಮಗ್ರ ಮಾಹಿತಿ ನೀಡಬೇಕು. ಜತೆಗೆ, ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಅರ್ಜಿದಾರರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.