ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‍ಸಿ) ಎಸ್ ಪಿ ಷಡಕ್ಷರಿಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿರುವ ಆದೇಶಕ್ಕೆ ಸಂಬಂಧಿಸಿದ ಕಡತ ಹಾಗೂ ಹೂಟಾ ಸಮಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮನವಿ ಮಾಡಿದೆ.
ಅಧ್ಯಕ್ಷ ಹುದ್ದೆಗೆ ನೇಮಿಸಿರುವ ಕ್ರಮ ಕಾನೂನು ಬಾಹಿರ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಕಡತ ಹಾಗೂ ಹೂಟಾ ಸಮಿತಿ ನೀಡಿದ್ದ ವರದಿ ಸಿದ್ದವಿದೆ. ಆದರೆ, ಅದು ಕನ್ನಡ ಭಾಷೆಯಲ್ಲಿದ್ದು, ಅದನ್ನು ಇಂಗ್ಲೀಷ್ ಭಾಷೆಗೆ ಅನುವಾದ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ. ಅದಕ್ಕಾಗಿ ಎರಡು ವಾರಗಳ ಕಾಲಾವಕಾಶಬೇಕು ಎಂದು ಮನವಿ ಮಾಡಿದರು.
ಈ ಮಧ್ಯೆ ಷಡಕ್ಷರಿಸ್ವಾಮಿ ಪರ ವಕೀಲರು ವಾದ ಮಂಡಿಸಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶ ಬೇಕು ಎಂದು ಕೋರಿದರು. ಈ ಎರಡು ಮನವಿಗಳನ್ನು ಮಾನ್ಯ ಮಾಡಿದ ಪೀಠ ನಾಲ್ಕು ವಾರಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನಿರ್ದೇಶನಗಳು, ಹೂಟಾ ಸಮಿತಿ ಶಿಫಾರಸುಗಳನ್ನು ಉಲ್ಲಂಘಿಸಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಜ್ಞರನ್ನು ಒಳಗೊಂಡ ಶೋಧನಾ ಸಮಿತಿ (ಸರ್ಚ್ ಕಮಿಟಿ) ಶಿಫಾರಸು ಮಾಡುವ ಹೆಸರುಗಳನ್ನು ಮುಖ್ಯಮಂತ್ರಿ ಅನುಮೋದಿಸಿ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳಿಸಿಕೊಡಬೇಕು. ಆದರೆ, ಈ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.