ಬೆಂಗಳೂರು : ಕೊರೊನಾ ಹಿನ್ನೆಲೆ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೈಗೊಳ್ಳಬೇಕಿದ್ದ 2 ದಿನದ ಪ್ರವಾಸ ಮೊಟಕುಗೊಳಿಸಿದ್ದಾರೆ.
ಮುಂದಿನ ಒಂದು ವಾರ ರಾಜ್ಯಾದ್ಯಂತ ಸಭೆ-ಸಮಾರಂಭ, ಸಮಾವೇಶ ನಡೆಸದಂತೆ ನಿರ್ಬಂಧ ಹೇರಲಾಗಿದೆ. ರಾಜ್ಯ ಸರ್ಕಾರದ ಈ ಸೂಚನೆಯನ್ನು ಪಾಲಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ತಮ್ಮ ಎರಡು ದಿನದ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ರಾಜ್ಯದ ಕಲಬುರುಗಿಯಲ್ಲಿ ಕೊರೊನಾಗೆ ದೇಶದಲ್ಲೇ ಮೊದಲ ಸಾವು ನಿನ್ನೆ ಸಂಭವಿಸಿರುವ ಹಿನ್ನೆಲೆ, ರಾಜ್ಯ ಸರ್ಕಾರ ರಾಜ್ಯಾದ್ಯಂತ ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ನಿರ್ಬಂಧಿಸಿದೆ.
ಮುಂದಿನ ಒಂದು ವಾರ ನಿಯಮ ಜಾರಿಯಲ್ಲಿರುವ ಹಿನ್ನೆಲೆ ಶನಿವಾರ ಮತ್ತು ಭಾನುವಾರ ರಾಜ್ಯದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರವಾಸ ಹಾಗೂ ಸಭೆಗಳನ್ನು ಸಿದ್ದರಾಮಯ್ಯನವರು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ.