ಬೆಂಗಳೂರು : ರಾಜ್ಯದ ಕೆಲ ಭಾಗಗಳಲ್ಲಿ ಕೊರೊನಾ ವೈರಸ್ (ಕೋವಿಡ್-19) ಹರಡುತ್ತಿದೆ. ಅದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಅನೇಕ ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಕೊರೊನಾ ವೈರಸ್ ಶಂಕಿತರಿಗೆ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಹಾಗೂ ಕೊರೊನಾ ನಿಯಂತ್ರಣಕ್ಕೆ ಬರುವವರೆಗೆ ಮುಂಬರುವ ಎಲ್ಲಾ ಸಾರ್ವತ್ರಿಕ ರಜಾ ದಿನಗಳಂದೂ ಕರ್ತವ್ಯ ನಿರ್ವಹಿಸಬೇಕು. ಪಾಲಿಕೆಯ ಎಲ್ಲಾ ಹೆರಿಗೆ ಆಸ್ಪತ್ರೆಗಳು, ನಗರ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರುಗಳು, ಕಚೇರಿಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಎಲ್ಲಾ ಖಾಯಂ ಮತ್ತು ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ, ಯಾವುದೇ ಸಾರ್ವತ್ರಿಕ ರಜೆ ತೆಗೆದುಕೊಳ್ಳದೆ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಆದೇಶದ ಮೇರೆಗೆ ಬಿಬಿಎಂಪಿ ವಿಶೇಷ ಅಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಕೊರೊನಾ ಪರಿಸ್ಥಿತಿ ಸುಧಾರಿಸುವವರೆಗೂ ಆಸ್ಪತ್ರೆಯ ಕಚೇರಿ ಮುಖ್ಯಸ್ಥರು, ಎಲ್ಲಾ ವೈದ್ಯರು, ಅಧಿಕಾರಿಗಳು, ಸಿಬ್ಬಂದಿಗೆ ಯಾವುದೇ ರೀತಿಯ ರಜೆ ಮಂಜೂರು ಮಾಡದಂತೆ ಸೂಚಿಸಿದೆ. ಈಗಾಗಲೇ ರಜೆಯ ಮೇಲೆ ತೆರಳಿರುವವರನ್ನೂ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ವಿಶೇಷ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.