ಬೆಂಗಳೂರು: ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಇಬ್ಬರು ಅಚ್ಚರಿಯ ಅಭ್ಯರ್ಥಿಗಳ ಆಯ್ಕೆ ಆಗಿದೆ. ಬಿಎಂಟಿಸಿ ಮಾಜಿ ಅಧ್ಯಕ್ಷ ನಾಗರಾಜ್ ಯಾದವ್ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಜೂನ್ 3ಕ್ಕೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಇಂದು ಕಾಂಗ್ರೆಸ್ ಪಟ್ಟಿ ಬಿಡುಗಡೆಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಅಭ್ಯರ್ಥಿಗಳನ್ನು ಪ್ರಕಟಿಸಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಅಬ್ದುಲ್ ಜಬ್ಬಾರ್ಗೆ ಪಕ್ಷ ಇನ್ನೊಂದು ಮಹತ್ವದ ಅವಕಾಶ ನೀಡಿದೆ. ಪಕ್ಷದ ವಕ್ತಾರರಾಗಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಾಗರಾಜ್ ಯಾದವ್ಗೆ ಬಿಎಂಟಿಸಿ ಅಧ್ಯಕ್ಷ ಸ್ಥಾನವನ್ನು ಈ ಹಿಂದೆ ನೀಡಲಾಗಿತ್ತು. ಇದೀಗ ವಿಧಾನಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಮಾಜಿ ಸಚಿವ ಆರ್ ಬಿ ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ ಹಾಗೂ ವೀಣಾ ಅಚ್ಚಯ್ಯ ನಿವೃತ್ತಿಯಾಗುತ್ತಿದ್ದಾರೆ. ಈ ಮೂವರು ಸಹ ಮರು ಆಯ್ಕೆಗೆ ಸಾಕಷ್ಟು ಪ್ರಯತ್ನ ನಡೆಸಿದ್ದರು. ಇವರ ಜೊತೆಗೆ ಹಲವು ಮಾಜಿ ಸದಸ್ಯರು ಪರಿಷತ್ ಪ್ರವೇಶಕ್ಕೆ ತಮ್ಮ ಆಸಕ್ತಿ ವ್ಯಕ್ತಪಡಿಸಿದ್ದರು. ಆಯ್ಕೆ ವಿಚಾರದ ಗೊಂದಲ ರಾಜ್ಯಮಟ್ಟದಲ್ಲಿ ಬಗೆಹರಿಸಿಕೊಳ್ಳಲಾಗದೆ ಹೈಕಮಾಂಡ್ ಮೆಟ್ಟಿಲೇರಿತ್ತು. ಆದರೆ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬಾರ್ ಹೆಸರು ಪರಿಗಣನೆ ಆಗಿದೆ. ಈ ಘೋಷಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ಇನ್ನಷ್ಟು ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.
ಶಾಸಕರ ಸಂಖ್ಯಾಬಲದ ಮೇಲೆ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಮರ್ಥ್ಯವನ್ನು ಕಾಂಗ್ರೆಸ್ ಹೊಂದಿದೆ. ಎರಡು ಸ್ಥಾನಗಳಿಗೆ ಹತ್ತಕ್ಕೂ ಹೆಚ್ಚು ಪ್ರಬಲ ಆಕಾಂಕ್ಷಿಗಳು ಪೈಪೋಟಿ ನಡೆಸಿದ್ದರು. ಮಾಜಿ ಸಚಿವ ಎಸ್ ಆರ್ ಪಾಟೀಲ್ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ ಪುಷ್ಪ ಅಮರನಾಥ್ ಸೇರಿದಂತೆ ಘಟಾನುಘಟಿಗಳು ಟಿಕೆಟ್ ಸಿಗುವ ನಿರೀಕ್ಷೆ ಹೊಂದಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಅಚ್ಚರಿಯ ಆಯ್ಕೆ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದೆ.
(ಇದನ್ನೂ ಓದಿ: ಪರಿಷತ್ ಚುನಾವಣೆ: ರಾತ್ರಿ ಅಥವಾ ನಾಳೆ ಅಭ್ಯರ್ಥಿ ಘೋಷಣೆ, ಹೊರಟ್ಟಿ ವಿರುದ್ಧ ಅಭ್ಯರ್ಥಿ ಕಣಕ್ಕೆ - ಹೆಚ್ಡಿಕೆ)