ಬೆಂಗಳೂರು: ಕೋವಿಡ್ ನಂತರ ಅದ್ಧೂರಿಯಾಗಿ ನಡೆಯುತ್ತಿರುವ ಮೈಸೂರು ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೊತೆಗೆ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಸಾರಿಗೆ ಬಸ್ ಸೇವೆಗಳನ್ನು ಒದಗಿಸಿದ್ದು, ಕಳೆಗುಂದಿರುವ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿದೆ.
ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್ ಸಾರಿಗೆ ಸೇವೆಗಳು ಸೇರಿದಂತೆ ದಸರಾ ರಜೆಗಳ ಪಯುಕ್ತ ಕೆಎಸ್‌ಆರ್‌ಟಿಸಿ ನಿಗಮದಿಂದ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಕ್ಟೋಬರ್ 3 ರವರೆಗೂ ಈ ವಿಶೇಷ ಬಸ್ಗಳ ಸೇವೆ ಇರಲಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಸೇವೆ ಲಭ್ಯವಿರಲಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಾಪಸ್ ಬರಲು ಪೂರಕವಾಗಿ ಅಕ್ಟೋಬರ್ 7 ರಿಂದ 9 ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡುತ್ತಿರುವುದಾಗಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ದಸರಾ-2022 ಪ್ರಯುಕ್ತ ಕರಾರಸಾ ನಿಗಮದಿಂದ 450 ವಿಶೇಷ ಸಾರಿಗೆ ವ್ಯವಸ್ಥೆ: ಇನ್ನು ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 200 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣಿಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 250ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 450 ದಸರಾ ವಿಶೇಷ ವಾಹನಗಳು ರಸ್ತೆಗಿಳಿಯಲಿವೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ "ಪ್ಲೈ ಬಸ್" (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಸಲಾಗಿರುತ್ತದೆ. ಇ-ಟಿಕೆಟ್ ಬುಕಿಂಗ್‌ನ್ನು www.ksrtc karnataka.gov.in ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ.
ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು “ಮಾಹಿತಿ ಕೇಂದ್ರ" ವನ್ನು ಪ್ರತ್ಯೇಕವಾಗಿ ತೆರೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಯಾಣಿಕರಿಗೆ ರಿಯಾಯಿತಿ: ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳಲ್ಲಿಯೂ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಸಲಾಗಿದೆ ಎಂದು ತಿಳಿಸಿದ್ದಾರೆ.
(ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ಮುಂದೆ ಪ್ರತಿ ತಿಂಗಳ 1ರಂದೇ ವೇತನ ಪಾವತಿ!)