ಬೆಂಗಳೂರು: ಮಾಜಿ ಸಚಿವ, ಸಿಂದಗಿ ಶಾಸಕ ಎಂ.ಸಿ.ಮನಗೂಳಿ ಅವರ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಜಾತ್ಯತೀತ ಜನತಾದಳದ ಹಿರಿಯ ನಾಯಕ, ಮಾಜಿ ಸಚಿವ ಮತ್ತು ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರಿಗೆ ನನ್ನ ಶ್ರದ್ಧಾಂಜಲಿ. ದೀರ್ಘಕಾಲದಿಂದ ಸ್ನೇಹಿತರಾಗಿದ್ದ ಮನಗೂಳಿ ಜನಾನುರಾಗಿ ರಾಜಕಾರಣಿಯಾಗಿದ್ದರು. ಅವರ ಕುಟುಂಬವರ್ಗದ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ...ಶಾಸಕ ಎಂ.ಸಿ. ಮನಗೂಳಿ ವಿಧಿವಶ: ಸಿಂದಗಿಯ ನಿವಾಸದಲ್ಲಿ ನೀರವ ಮೌನ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಮಾಜಿ ಸಚಿವರು, ಸಿಂದಗಿ ಕ್ಷೇತ್ರದ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಎಂ.ಸಿ.ಮನಗೂಳಿ ಅವರ ನಿಧನ ತೀವ್ರ ನೋವುಂಟು ಮಾಡಿದೆ. ಅವರ ಕುಟುಂಬ ವರ್ಗದವರಿಗೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಗ್ರಾಮ ಸೇವಕನಿಂದ ಗ್ರಾಮೀಣಾಭಿವೃದ್ಧಿ ಮಂತ್ರಿಯವರೆಗೆ ನಡೆದ ಹಿರಿಯ ಶಾಸಕರು ಎಂ.ಸಿ.ಮನಗೂಳಿ ಅವರ ನಿಧನದಿಂದ ಸಜ್ಜನ ಸರಳ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ತಮ್ಮ ಜೀವನದುದ್ದಕ್ಕೂ ಸರಳವಾಗಿ ಬದುಕಿ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಅವರ ಬದುಕಿನ ದಾರಿ ನಮಗೆಲ್ಲ ಮಾರ್ಗದರ್ಶನವಾಗಲಿ. ಕುಟುಂಬ ವರ್ಗದವರಿಗೆ ನನ್ನ ಸಂತಾಪಗಳು ಎಂದು ಮಾಜಿ ಗೃಹಸಚಿವ ಎಂಬಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಟ್ವೀಟ್ ಮಾಡಿದ್ದು, ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಶಾಸಕರಾದ ಎಂ.ಸಿ.ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ, ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಭಾವಪೂರ್ಣ ಶ್ರದ್ಧಾಂಜಲಿ ಎಂದಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಸಿಂದಗಿ ಕ್ಷೇತ್ರದ ಶಾಸಕರು, ಆತ್ಮೀಯರು ಆಗಿದ್ದ ಎಂ.ಸಿ.ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಕುಟುಂಬದವರಿಗೆ ಹಾಗೂ ಬಂಧು ಮಿತ್ರರಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಟ್ವೀಟ್ ಮಾಡಿದ್ದಾರೆ.