ಬೆಂಗಳೂರು: ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಹಿಜಾಬ್ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮೌಖಿಕ ಆದೇಶ ಹೊರಡಿಸಲಾಗಿದೆ. ತೀರ್ಪು ಪ್ರಕಟಕ್ಕೂ ಮುನ್ನ, ರಾಜ್ಯದ ಎಲ್ಲ ಶಾಲೆಗಳಿಗೆ ಅನ್ವಯಿಸುವಂತೆ ಶಿಕ್ಷಕರು, ಮಕ್ಕಳು ಹಾಗೂ ಶಾಲಾ ಆಡಳಿತ ಮಂಡಳಿಯವರು ಹೇಳಿಕೆ ನೀಡದಂತೆ ಆಯಾ ವಲಯದ ಡಿಡಿಪಿಐಗಳಿಂದ ಮೊಬೈಲ್ ಸಂದೇಶದ ಮೂಲಕ ಮಾಹಿತಿ ನೀಡಲಾಗಿತ್ತು.
ವಿದ್ಯಾಸಾಗರ್ ಶಾಲೆಯೆದುರು ಭದ್ರತೆ: ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆ ಈಗಾಗಲೇ ಶಾಲಾ ಕಾಲೇಜುಗಳ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೆಲ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದರೆ ಮತ್ತೆ ಹಲವು ಶಾಲೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿಗಳನ್ನು ತಿರಸ್ಕರಿಸಿದ ತ್ರಿಸದಸ್ಯ ಪೀಠ: ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಇತ್ತ ಚಂದ್ರಲೇಔಟ್ನ ವಿದ್ಯಾಸಾಗರ್ ಶಾಲೆ ಮುಂದೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಈ ಹಿಂದೆ ಹಿಜಾಬ್ ವಿಚಾರವಾಗಿ ಶಾಲೆ ಎದುರು ಗಲಾಟೆ ನಡೆದಿತ್ತು. ಮುಂಜಾಗ್ರತಾ ಕ್ರಮವಾಗಿ ಶಾಲೆ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸದ್ಯ ವಿದ್ಯಾಸಾಗರ್ ಶಾಲೆಯಲ್ಲಿ ಪರೀಕ್ಷೆ ನಡೆಯುತ್ತಿದೆ. ಇತ್ತ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ಕೊಡದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಸೂಚನೆ ನೀಡಿದೆ.