ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಉಂಟಾದ ನೆರೆ ಹಾವಳಿಯಿಂದ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರ ಸರ್ಕಾರ ಸ್ಪಂದಿಸದಿದ್ದರೂ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ನೆರೆ ಸಂತ್ರಸ್ತರಿಗೆ ಸಹಾಯಹಸ್ತ ಚಾಚುತ್ತಿದ್ದಾರೆ. ಈ ಬಾರಿ ನೆರೆ ಸಂತ್ರಸ್ತರಿಗೆ ಸಹಾಯ ಮಾಡುವ ಉದ್ದೇಶದಿಂದ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲು ವಾಲ್ಮೀಕಿ ಸಮುದಾಯದ ಮುಖಂಡರು ತೀರ್ಮಾನಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಶಾಸಕ ವೆಂಕಟರಮಣಯ್ಯ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸರಳವಾಗಿ ವಾಲ್ಮೀಕಿ ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ.
ಈ ಕುರಿತು ಮಾತನಾಡಿದ ಶಾಸಕ ವೆಂಕಟರಮಣಯ್ಯ, ವಾಲ್ಮೀಕಿ ಸಮುದಾಯದ ಮುಖಂಡರ ಈ ತೀರ್ಮಾನ ಇತರರಿಗೆ ಆದರ್ಶವಾಗಬೇಕು. ಹಿಂದೆ ನೆರೆ ಬಂದಾಗ ರಾಜ್ಯ ಸರ್ಕಾರ ದೆಹಲಿಗೆ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಿ ಪರಿಹಾರ ಕೇಳಿತ್ತು. ಆದರೆ, ಈಗ ಆ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ನಡೆಯುತ್ತಿಲ್ಲ. ರಾಜ್ಯದ 25 ಜನ ಬಿಜೆಪಿ ಸಂಸದರು ನೆರೆ ಪರಿಹಾರ ಬಿಡುಗಡೆ ಮಾಡಿಸುವಲ್ಲಿ ವಿಫಲರಾಗಿದ್ದಾರೆ ಬೇಸರ ವ್ಯಕ್ತಪಡಿಸಿದರು.