ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗು ಓರ್ವ ಮಾದಕ ವ್ಯಸನಿ ಸೇರಿದಂತೆ ನಾಲ್ವರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
ಉಡೇ ಉಡೇ ಊಜಾ(36), ಎಕೆಚುಕ್ವು ಡೇನಿಯಲ್(39), ತಸ್ಲೀಂ(20), ಮೊಹಮ್ಮದ್ ಉಮರ್ ಮುಕ್ತಿಯಾರ್(23) ಬಂಧಿತರು. ಇವರಿಂದ 2.85 ಲಕ್ಷ ರೂ. ಮೌಲ್ಯದ 105 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ಅನೂಪ್ ಶೆಟ್ಟಿ ತಿಳಿಸಿದರು.

ಈ ಆರೋಪಿಗಳು ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದರು. ಇದಾದ ಬಳಿಕ ಮತ್ತೋರ್ವ ಮಾದಕ ವ್ಯಸನಿಯನ್ನು ಬಂಧಿಸಿ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ರಾಯಚೂರು: ನಾಲ್ವರು ಬೈಕ್ ಕಳ್ಳರ ಬಂಧನ