ಬೆಂಗಳೂರು: ಐಷಾರಾಮಿ ಜೀವನ ನಡೆಸಲು ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 7 ಲಕ್ಷ ರೂ. ಮೌಲ್ಯದ 18 ಡಿಯೋ ಸ್ಕೂಟರ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಬಸಪ್ಪ, ಶ್ರೀನಿವಾಸ್, ಸಲೀಂ, ವಿಕ್ರಂ ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳು ಹೋಂಡಾ ಡಿಯೋ ದ್ವಿಚಕ್ರ ವಾಹನಗಳನ್ನು ಹೆಚ್ಚಾಗಿ ಕದಿಯುತ್ತಿದ್ದರು. ಹ್ಯಾಂಡಲ್ ಲಾಕ್ ಮುರಿದು ವಾಹನ ಕದ್ದು ಪರಾರಿಯಾಗುತ್ತಿದ್ದರು. ಕದ್ದ ಬೈಕ್‌ಗಳನ್ನು ತಮಿಳುನಾಡು ರಾಜ್ಯದಲ್ಲಿ ಕಡಿಮೆ ಬೆಲೆಗೆ ಮಾರುತ್ತಿದ್ದರು ಎಂದು ಹೇಳಿದ್ದಾರೆ.
ಕದ್ದ ಬೈಕ್ಗಳಲ್ಲೇ ಸುಲಿಗೆ ಮಾಡ್ತಿದ್ದ ಇಬ್ಬರ ಬಂಧನ: ಮತ್ತೊಂದು ಪ್ರಕರಣದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಸುಲಿಗೆಗಿಳಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಜರಾಜೇಶ್ವರಿನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ. ಬೆಲೆಯ 11 ಮೊಬೈಲ್‌ಗಳು ಮತ್ತು 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಖರ್ ಮತ್ತು ನಿರಂಜನ್ ಎಂಬುವವರನ್ನ ಬಂಧನ ಮಾಡಲಾಗಿದೆ. ಇವರಿಬ್ಬರು ಕಳ್ಳತನ ಮಾಡಿದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರೂ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಚಂದ್ರಲೇಔಟ್, ಅನ್ನಪೂರ್ಣೆಶ್ವರಿನಗರ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಸಹ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.