ಬೆಂಗಳೂರು: ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಮಾರ್ಚ್ 28 ಮತ್ತು 29ರಂದು ಭಾರತದಲ್ಲಿ ಸಾರ್ವತ್ರಿಕ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 28ರಂದು ಗ್ರಾಮ ಪಂಚಾಯತ್ ಮತ್ತು ತಾಲೂಕು ಹಂತದ ಪ್ರತಿಭಟನೆ ನಡೆದರೆ, ಮಾರ್ಚ 29ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.
ಕಾರ್ಪೊರೇಟ್ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದು ಹಾಗೂ ರೈತರು ಮತ್ತು ಕೂಲಿಕಾರರನ್ನು ರಕ್ಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು. ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ ಒತ್ತಾಯಿಸಲಾಗುವುದು. ಬೆಲೆ ಏರಿಕೆ ನಿಯಂತ್ರಣಕ್ಕಾಗಿ ರೈತ ಹಾಗೂ ಕೂಲಿಕಾರರ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. 26 ಸಾವಿರ ರೂಪಾಯಿ ಸಮಾನ ಕನಿಷ್ಠ ವೇತನ ಸಿಗುವಂತಾಗಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ತಡೆಯಬೇಕು. ಅಂಗನವಾಡಿ, ಬಿಸಿಯೂಟ ಮತ್ತು ಕಾರ್ಯಕರ್ತರನ್ನು ಕೆಲಸಗಾರರೆಂದು ಗುರುತಿಸಿ ನ್ಯಾಯಬದ್ಧ ಸವಲತ್ತುಗಳನ್ನು ನೀಡಬೇಕು. ಇವೂ ಸೇರಿದಂತೆ ನಾನಾ ಅಂಶಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿರುವುದಾಗಿ ಮುಖಂಡರು ತಿಳಿಸಿದ್ದಾರೆ.
ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ನಾಳೆಯಿಂದ ಬ್ಯಾಂಕ್ ನೌಕರರ ಮುಷ್ಕರ ನೆಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 28 ಮತ್ತು 29ರಂದು ಬ್ಯಾಂಕಿಂಗ್ ವ್ಯವಹಾರದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಸೋಮವಾರ ಮತ್ತು ಮಂಗಳವಾರ ಬ್ಯಾಂಕ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಬ್ಯಾಂಕ್ ನೌಕರರ ಸಂಘಟನೆಗಳ ಒಕ್ಕೂಟದ ಮುಖಂಡರು ಹೇಳಿದ್ದಾರೆ.
ಇದನ್ನೂ ಓದಿ: ಏಪ್ರಿಲ್ನಲ್ಲಿ ಮೋದಿ, ಅಮಿತ್ ಶಾ, ನಡ್ಡಾ ರಾಜ್ಯ ಪ್ರವಾಸ: ಬಿಜೆಪಿಯಲ್ಲಿ ಗರಿಗೆದರಿದ ಚಟುವಟಿಕೆ