ಬೆಂಗಳೂರು : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಬಕ್ರೀದ್ ಹಬ್ಬದ ದಿನ ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರ ಬ್ರೇಕ್ ಹಾಕಿದೆ.
ಮುಸ್ಲಿಂ ಬಾಂಧವರ 2ನೇ ಪ್ರಮುಖ ಹಬ್ಬವಾದ ಬಕ್ರೀದ್ ಅಗಸ್ಟ್1ರಂದು ಆಚರಿಸಲಾಗುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಜುಲೈ31ರಂದು ಆಚರಿಸಲಾಗುತ್ತಿದೆ. ಬಕ್ರೀದ್ ಹಬ್ಬದ ದಿನ ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಆದರೆ, ಕೊರೊನಾ ಭೀತಿ ಹಿನ್ನೆಲೆ ಈದ್ಗಾ ಬಯಲು ಪ್ರದೇಶದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆ ಮಾಡುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಸೀದಿಗಳಲ್ಲಿ ಬ್ಯಾಚ್ ಪ್ರಕಾರ ಪ್ರಾರ್ಥನೆ ಮಾಡಲು ಅವಕಾಶ ನೀಡಿದ್ದು, ಕನಿಷ್ಠ 50 ಮಂದಿ ಮಾತ್ರ ಪ್ರಾರ್ಥನೆ ಸಲ್ಲಿಸಬಹುದು. ಅದೇ ರೀತಿ ಮಸೀದಿಗಳಲ್ಲಿ ಈದ್ ನಮಾಜ್ ನಿರ್ವಹಿಸುತ್ತಿರುವುದರಿಂದ ಯಾವುದೇ ಚ್ಯುತಿ ಬರುವುದಿಲ್ಲವೆಂದು ಧಾರ್ಮಿಕ ಗುರುಗಳು ತಿಳಿಸಿದ್ದು, ಈ ಬಗ್ಗೆ ಈಗಾಗಲೇ ಧಾರ್ಮಿಕ ಗುರುಗಳು, ಜನ ಪ್ರತಿನಿಧಿಗಳು ಹಾಗೂ ವಕ್ಫ್ ಮಂಡಳಿಯೊಂದಿಗೆ ಚರ್ಚಿಸಲಾಗಿದೆ.
ರಾಜ್ಯದಲ್ಲಿ ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಇವರ ಅಧಿಕೃತ ಜ್ಞಾಪನದ ಪ್ರಕಾರ ಯಾವುದೇ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಜನರು ಒಟ್ಟು ಗೂಡುವುದನ್ನು ನಿಷೇಧಿಸಲಾಗಿದೆ.
ಷರತ್ತಿಗೊಳಪಟ್ಟು ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆಗೆ ಅವಕಾಶವಿರುತ್ತದೆ. ಆದರೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ವಹಿಸುವ ಮೊದಲು ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ.
1. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಹಾಕಬೇಕು.
2.60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡುವುದು.
3. ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು.
4. ಮಸೀದಿಗಳಿಗೆ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಿಸಬೇಕು.
5. ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್‌ನಿಂದ ಶುಚಿಗೊಳಿಸಬೇಕು.
6. ಮಸೀದಿಗಳಲ್ಲಿರುವ ಧಾರ್ಮಿಕ ಗ್ರಂಥಗಳನ್ನು ಮುಟ್ಟುವಂತಿಲ್ಲ.
7. ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು(ಜಾಯನಮಾಜ್) ಕಡ್ಡಾಯವಾಗಿ ತರುವುದು.
8. ಹಸ್ತಲಾಘವ ಮತ್ತು ಆಲಿಂಗನ ಮಾಡದಿರುವಂತೆ ಸೂಚಿಸುವುದು.
9. ಅಪರಿಚಿತರು ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬಂದಲ್ಲಿ ಅವರ ಬಗ್ಗೆ ವಿಶೇಷ ಗಮನಹರಿಸಬೇಕು.