ಬೆಂಗಳೂರು: ಹಾನಗಲ್ ಹಾಗು ಸಿಂದಗಿ ಈ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಸುತ್ತಿದೆ.
ಹಾನಗಲ್ ಕ್ಷೇತ್ರದಲ್ಲಿ ನಾಲ್ಕೈದು ಜನ ಪ್ರಬಲ ಆಕಾಂಕ್ಷಿಗಳಿದ್ದು, ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಸಿಎಂ ತವರು ಜಿಲ್ಲೆಯ ಕ್ಷೇತ್ರವಾಗಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಾಗಿದೆ.
ಹಾನಗಲ್ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿವರು..
1. ಸಿಎಂ ಉದಾಸಿ ಅವರ ಸೊಸೆ ರೇವತಿ ಉದಾಸಿ
2. ಕಲ್ಯಾಣ ಕುಮಾರ್ ಶೆಟ್ಟರ್
3. ಸಿದ್ದರಾಜ ಕಲಕೋಟೆ
4. ಶಿವರಾಜ ಸಜ್ಜನ್
5. ಮಹಾಂತೇಶ ಸೊಪ್ಪಿನ
ಉದಾಸಿ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎನ್ನುವ ಒತ್ತಾಯ ಸ್ಥಳೀಯ ನಾಯಕರಿಂದ ಕೇಳಿ ಬರುತ್ತಿದೆ. ಒಂದು ಹಂತದಲ್ಲಿ ಸಂಸದ ಶಿವಕುಮಾರ್ ಉದಾಸಿ ಅವರು ರಾಜ್ಯ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಹಾನಗಲ್ ಉಪಚುನಾವಣೆಗೆ ನಿಲ್ಲುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿತ್ತು. ಆದರೆ ಹೈಕಮಾಂಡ್ ಇದಕ್ಕೆ ಅವಕಾಶ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಆದರೂ ಉದಾಸಿ ಕುಟುಂಬಕ್ಕೆ ಟಿಕೆಟ್ ನೀಡಿದರೆ ಗೆಲುವು ಸುಲಭ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಮಂಗಳಾ ಅಂಗಡಿ ಗೆಲುವಿನಂತೆ ಅನುಕಂಪದ ಅಲೆಯ ಲಾಭ ಪಡೆಯಲು ಉದಾಸಿ ಸೊಸೆ ರೇವತಿ ಉದಾಸಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ. ಆದರೂ ಕೂಡ ಇತರ ಆಕಾಂಕ್ಷಿಗಳು ತಮ್ಮ ತಮ್ಮ ಮೂಲಗಳಿಂದಲೇ ಲಾಭಿ ಆರಂಭಿಸಿದ್ದಾರೆ.
ಸಿಂದಗಿ ಕ್ಷೇತ್ರಕ್ಕೆ ಬಿಜೆಪಿ ಆಕಾಂಕ್ಷಿಗಳಿವರು..
1. ಮಾಜಿ ಶಾಸಕ ರಮೇಶ್ ಬೂಸನೂರು,
2. ಸಂಗನಗೌಡ ಪಾಟೀಲ್
3. ಸಿದ್ದು ಬಿರಾದಾರ
ಜೆಡಿಎಸ್ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಗೆಲ್ಲಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಬಿಜೆಪಿಗೆ ದೊಡ್ಡ ತಲೆ ನೋವಾಗಿದೆ. ಅಳೆದು ತೂಗಿ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾಗಿದೆ.
ಭಾನುವಾರು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಕೋರ್ ಕಮಿಟಿ ಸಭೆಯಲ್ಲಿ ಆಕಾಂಕ್ಷಿಗಳ ಕುರಿತು ಚರ್ಚಿಸಿ ಅಂತಿಮವಾಗಿ ಅಭ್ಯರ್ಥಿಯನ್ನು ಘೋಷಿಸಲು ಹೈಕಮಾಂಡ್ಗೆ ಕಳುಹಿಸಿ ಕೊಡಲಾಗುತ್ತದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಹಾನಗಲ್ ಉಪಚುನಾವಣೆಗೆ ಡೇಟ್ ಫಿಕ್ಸ್: ಗರಿಗೆದರಿದ ರಾಜಕೀಯ ಚಟುವಟಿಕೆಗಳು