ಬೆಂಗಳೂರು : ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಇಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಭೇಟಿ ಮಾಡಿ ರಾಜ್ಯದ ಕೆಲವು ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಲು ಮನವಿ ಮಾಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹಾದು ಹೋಗುವ ಚನ್ನರಾಯಪಟ್ಟಣ-ಹೊಳೆನರಸೀಪುರ-ಅರಕಲಗೂಡು-ಮಡಿಕೇರಿ-ಮಾರ್ಕೋಟ-ಕೇರಳ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಿ ನಾಲ್ಕು ಪಥದ ರಸ್ತೆಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲು ಶೀಘ್ರದಲ್ಲೇ ಅನುಮೋದನೆ ನೀಡುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ. ಜಿಲ್ಲೆಯ ಮತ್ತೊಂದು ರಾಷ್ಟ್ರೀಯ ಹೆದ್ದಾರಿ ಹೊಳೆನರಸೀಪುರ ತಾಲೂಕಿನ ಯಡಗೋಡನಹಳ್ಳಿ ಬಿಳಿಕೆರೆ ಮತ್ತು ಹಾಸನ ಬೇಲೂರು ಎರಡು ಪಥದ ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿಯಾಗಿ ಟೆಂಡರ್ ಕರೆಯಲು ಅನುಮೋದನೆ ನೀಡುವಂತೆ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಟೆಂಡರ್ ಕರೆಯಲು ಅನುಮೋದನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಹೆಚ್ ಡಿ ರೇವಣ್ಣ, ಸಿ ಎಸ್ ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡರು ಉಪಸ್ಥಿತರಿದ್ದರು.